ಕೊಪ್ಪಳ: ‘ಕೃಷಿ ಚಟುವಟಿಕೆಗೆ ಯೂರಿಯಾ ರಾಸಾಯನಿಕ ಗೊಬ್ಬರ ನೀಡದೆ ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿ ಬಿಜೆಪಿ ನೇತೃತ್ವದಲ್ಲಿ ನಗರದ ಅಶೋಕ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಕೆಲವು ದಿನಗಳ ಹಿಂದೆ ಜಿಲ್ಲೆಯಲ್ಲಿ ಯೂರಿಯಾದ ಅಭಾವ ವ್ಯಾಪಕವಾಗಿತ್ತು. ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದ ಬಿಜೆಪಿಯ ಮುಖಂಡರು ಈಗ ಪ್ರತಿಭಟನೆ ಮೂಲಕ ಸರ್ಕಾರದ ವಿರುದ್ಧ ಹೋರಾಟ ನಡೆಸಿದರು.
‘ರಾಜ್ಯದಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಿಸಿರುವುದು ಮತ್ತು ರಸಗೊಬ್ಬರ ಕೊರತೆಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸಿಲ್ಲ. ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾದ ದಿನದಿಂದ ಈ ನಾಡಿನ ರೈತರಿಗೆ ಒಳಿತಾಗುವಂತಹ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮುಂಗಾರು ಪೂರ್ವದಿಂದಲೂ ಉತ್ತಮ ಮಳೆಯಿದ್ದರೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ’ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
‘ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ ನಡೆಯುತ್ತಿದೆ. ರೈತರು ಎರಡ್ಮೂರು ಪಟ್ಟು ಹೆಚ್ಚು ಹಣ ನೀಡಿ, ರಸಗೊಬ್ಬರ ಖರೀದಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರಿಗೆ ಕಳಪೆ ಬಿತ್ತನೆ ಬೀಜ ನೀಡಿದ್ದು, ರೈತರು ಕಂಗಾಲಾಗಿದ್ದಾರೆ. ಈ ಕಾರಣಗಳಿಂದಾಗಿ ಅನ್ನದಾತರು ಹೋರಾಟ ಮಾಡುವಂತಾಗಿದೆ’ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ ಗುಳದಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಹೆಸರೂರು, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮೈನಳ್ಳಿ, ತಾಲ್ಲೂಕಾಧ್ಯಕ್ಷ ಪ್ರದೀಪ್ ಹಿಟ್ನಾಳ, ಮುಖಂಡರಾದ ರಾಘವೇಂದ್ರ ಪಾನಘಂಟಿ, ವಿ.ಎಂ.ಭೂಸನೂರಮಠ, ವಾಣಿಶ್ರೀ ಮಠದ, ಮಹಾಲಕ್ಷ್ಮಿ ಕಂದಾರಿ, ಗೀತಾ ಮುತ್ತಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.