ADVERTISEMENT

ಕುಷ್ಟಗಿ: ಶಾಲೆಗೆ ಭೇಟಿ ನೀಡದ ಕ್ಷೇತ್ರ ಶಿಕ್ಷಣಾಧಿಕಾರಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 16:12 IST
Last Updated 21 ಜುಲೈ 2024, 16:12 IST

ಕುಷ್ಟಗಿ: ತಾಲ್ಲೂಕಿನ ನಿಡಶೇಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಸಮಸ್ಯೆ, ಪುಂಡರ ಹಾವಳಿ ಮತ್ತು ಶಿಕ್ಷಕಿಯರ ಅಸಮರ್ಪಕ ಸೇವೆ ಸೇರಿದಂತೆ ಇತರೆ ಸಮಸ್ಯೆಗಳು ಗಮನಕ್ಕೆ ಬಂದರೂ ಪರಿಹರಿಸುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಲೆಗೆ ಸಂಬಂಧಿಸಿದ ವಿಷಯಗಳ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗೆ ಪತ್ರ ಬರೆದಿದ್ದು, ‘ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲ. ಶಾಲೆ ಕೊಠಡಿ ನಿರ್ಮಾಣದ ಕಾಮಗಾರಿ ಎರಡು ವರ್ಷಗಳಿಂದಲೂ ಸ್ಥಗಿತಗೊಂಡಿದ್ದು, ಅಪೂರ್ಣ ಕೊಠಡಿಗಳಲ್ಲಿ ಕಿಡಿಗೇಡಿಗಳು ಅನೈತಿಕ ಚಟವಟಿಕೆ ನಡೆಸುತ್ತಿದ್ದಾರೆ’ ಎಂದು ದೂರಿದ್ದಾರೆ.

‘ಶಾಲೆಯ ವಿಜ್ಞಾನ, ಗಣಿತ ಬೋಧಿಸಬೇಕಾದ ಶಿಕ್ಷಕಿ ಶಿವಲೀಲಾ ಹಂದಿಗನೂರು ಎಂಬುವವರು ಸರಿಯಾಗಿ ಪಾಠ ಮಾಡುತ್ತಿಲ್ಲ. ಈ ಬಗ್ಗೆ ಅನೇಕ ಬಾರಿ ತಿಳಿಹೇಳಿದರೂ ಅದೇ ಪ್ರವೃತ್ತಿ ಮುಂದುವರಿಸಿದ್ದಾರೆ. ಅಲ್ಲದೆ ಶಾಲೆ ಆರಂಭಗೊಂಡ ಕೆಲವೇ ದಿನಗಳಲ್ಲಿ ಶಿಶುಪಾಲನಾ ರಜೆ ಪಡೆದಿರುವುದರಿಂದ ಈ ವಿಷಯಗಳಲ್ಲಿ ಮಕ್ಕಳಿಗೆ ಪಾಠ ಮಾಡುವವರೇ ಇಲ್ಲದಂತಾಗಿದೆ. 14 ವರ್ಷಗಳಿಂದ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಈ ಶಿಕ್ಷಕಿಯನ್ನು ವರ್ಗ ಮಾಡಿ ಬೇರೆ ಶಿಕ್ಷಕರನ್ನು ನಿಯೋಜಿಸಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

‘ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಕೇವಲ ಎರಡು ಕಿ.ಮೀ ಸನಿಹದಲ್ಲಿದ್ದರೂ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಲ್ಲ. ಈಗಲಾದರೂ ಶಾಲೆಗೆ ಖುದ್ದಾಗಿ ಭೇಟಿ ನೀಡಬೇಕು. ಬೇಡಿಕೆಗೆ ಸ್ಪಂದಿಸದಿದ್ದರೆ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು’ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಹಿತಿಗಾಗಿ ಹಲವು ಬಾರಿ ಸಂಪರ್ಕಿಸಿದರೆ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ದೂರವಾಣಿ ಕರೆ ಸ್ವೀಕರಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.