ADVERTISEMENT

ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಒಪ್ಪಂದ ರದ್ದು: ಫೌಜೀಯಾ ತರುನ್ನುಮ್

ಗ್ರಾಮೀಣ ಕುಡಿಯುವ ನೀರಿನ ಯೋಜನೆ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 4:22 IST
Last Updated 7 ಏಪ್ರಿಲ್ 2022, 4:22 IST
ಫೌಜೀಯಾ ತರುನ್ನುಮ್
ಫೌಜೀಯಾ ತರುನ್ನುಮ್   

ಕೊಪ್ಪಳ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನಿಗದಿತ ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸದಿದ್ದರೆ ಎಲ್&ಟಿ ಕಂಪನಿಯೊಂದಿಗಿನ ಒಪ್ಪಂದ ರದ್ದು ಗೊಳಿಸುವುದಲ್ಲದೆ, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿಯ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಡಿಬಿಓಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಐದು ವರ್ಷಗಳಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ನಡೆಯುತ್ತಲೇ ಇದೆ. ಸದರಿ ಕಾಮಗಾರಿ ಅನುಷ್ಠಾನದಲ್ಲಿ ಅನಗತ್ಯ ವಿಳಂಬ ಹಾಗೂ ಲೋಪದೋಷಗಳ ಕುರಿತು ಜಿಲ್ಲಾ ಪಂಚಾಯಿತಿಗೆ ಸಾರ್ವಜನಿಕರು ದೂರು ಸಲ್ಲಿಸುತ್ತಿದ್ದು, ಈ ಬಗ್ಗೆ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ನಿರ್ದೇಶನಗಳನ್ನು ಹಲವಾರು ಬಾರಿ ಪ್ರತೀ ಸಭೆಯಲ್ಲೂ ನೀಡುತ್ತಾ ಬರಲಾಗಿದೆ. ಆದರೂ ಎಲ್&ಟಿ ಕಂಪನಿಯವರು ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ಹೊಂದಿರುವುದು ಕಂಡುಬರುತ್ತಿದೆ ಎಂದರು.

ADVERTISEMENT

ಜಿಲ್ಲೆಯ ಕುಷ್ಟಗಿ ಹಾಗೂ ಯಲಬುರ್ಗಾ ತಾಲ್ಲೂಕುಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೈಗೊಳ್ಳಬೇಕಾದ ವಿವಿಧ ಕಾಮಗಾರಿಗಳು ಇನ್ನೂ ಪೂರ್ಣವಾಗಿಲ್ಲ. ಓಎಚ್‌ಟಿ(ಓವರ್ ಹೆಡ್ ಟ್ಯಾಂಕ್) ಗಳ ನಿರ್ಮಾಣ ಕಾಮಗಾರಿಗಳು ಅಪೂರ್ಣವಾಗಿವೆ ಎಂದು ಎಲ್&ಟಿ ಸಂಸ್ಥೆಯ ಪ್ರಾದೇಶಿಕ ಮುಖ್ಯಸ್ಥ ಶ್ರೀಧರಗೆ ತರಾಟೆ ತೆಗೆದುಕೊಂಡರು.

ಕೆಲವೆಡೆ ಪೂರ್ಣ ನಿರ್ಮಾಣಗೊಂಡ ಓಎಚ್‌ಟಿ ಗಳಿಂದ ನೀರಿನ ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ. ಕಡು ಬೇಸಿಗೆ ಸಮಯದಲ್ಲಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ. ಆದರೂ ಯೋಜನೆಯ ಅನುಷ್ಠಾನಾಧಿಕಾರಿಗಳು ಕಂಪನಿಯೊಂದಿಗೆ ಸಮನ್ವಯತೆ ಸಾಧಿಸಿ, ಕಾಮಗಾರಿ ಪೂರ್ಣಗೊಳಿಸದೇ ಇರುವುದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿಯಮದಂತೆ ಪ್ರಮುಖ ಸಮತೋಲಿತ ಆಕರಗಳಲ್ಲಿ ನೀರನ್ನು ಸಂಗ್ರಹಿಸಿ ಅದನ್ನು ಪೈಪ್‌ಲೈನ್ ಮೂಲಕ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿ ನೀರನ್ನು ಸರಬರಾಜು ಮಾಡಬೇಕು. ಆದರೆ ತಾಲ್ಲೂಕುಗಳಲ್ಲಿ ನೀರಿನ ಆಕರಗಳ ನಿರ್ಮಾಣವೇ ಅಪೂರ್ಣವಾಗಿದೆ. ಇನ್ನು ಅದರಿಂದ ಗ್ರಾಮಗಳಿಗೆ ನೀರು ಸರಬರಾಜು ಆಗುವುದು ಯಾವಾಗ ಎಂದು ಕಂಪನಿ ಹಾಗೂ ಅಧಿಕಾರಿಗಳನ್ನು ಪ್ರಶ್ನಿಸಿದರು.

ಜಿ.ಪಂ.ಉಪ ಕಾರ್ಯದರ್ಶಿ ಶರಣ ಬಸವರಾಜ, ಗ್ರಾಮೀಣ ಕುಡಿವ ನೀರು, ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ರಂಗಯ್ಯ ಬಡಿಗೇರ, ಎಂಪಿಸಿಯ ಅತುಲ್ ಸೇರಿದಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸೆಕ್ಷನ್ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.