
ಗಂಗಾವತಿ: ತಾಲ್ಲೂಕಿನ ಆನೆಗೊಂದಿ ಭಾಗದ ರೈತರಿಗೆ ಕಿರುಕುಳ ನೀಡುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಸಮಿತಿ ಸದಸ್ಯರು ಶನಿವಾರ ನಗರದ ಅರಣ್ಯ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಜಿಲ್ಲಾಧ್ಯಕ್ಷ ಎ.ಹುಲುಗಪ್ಪ ಮಾತನಾಡಿ, ‘ತಾಲ್ಲೂಕಿನ ಆನೆಗೊಂದಿ, ಸಾಣಾಪುರ, ರಾಂಪುರ, ತಿರುಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ರೈತರು ಭೂಮಿ ಸಾಗುವಳಿ ಮಾಡಿಕೊಂಡು, ಉಪಜೀವನ ನಡೆಸುತ್ತಾ ಬರುತ್ತಿದ್ದಾರೆ. ಈಚೆಗೆ ಇದೇ ನೆಪದಲ್ಲಿ ಅರಣ್ಯಾಧಿಕಾರಿಗಳು ರೈತರನ್ನ ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವುದು ಖಂಡನೀಯ’ ಎಂದರು.
ಪ್ರಭಾವಿಗಳು, ರೆಸಾರ್ಟ್‌ಗಳ ಮಾಲಿಕರು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಬೃಹತ್ ಕಟ್ಟಡಗಳನ್ನು ನಿರ್ಮಿಸಿದರೂ, ಅರಣ್ಯ ಇಲಾಖೆ ಸಿಬ್ಬಂದಿ ಕಿಂಚಿತ್ತೂ ಕ್ರಮ ಜರುಗಿಸಲ್ಲ. ಆದರೆ ಬಡ ರೈತರ ವಿರುದ್ಧ ಕ್ರಮಕ್ಕೆ ಮುಂದಾಗುತ್ತಿದ್ದಾರೆ. ಇದು ಸರಿಯಲ್ಲ ಕೂಡಲೇ ರೈತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿ ಕಚೇರಿ ಸಹಾಯಕ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
ಸಮಿತಿ ತಾಲ್ಲೂಕಾಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಶೇಖಮ್ಮ, ಪದಾಧಿಕಾರಿಗಳಾದ ಎ.ಎಲ್.ತಿಮ್ಮಣ್ಣ, ಹುಲಿಗೆಮ್ಮ, ಸೋಮಮ್ಮ ಸೇರಿ ಆನೆಗೊಂದಿ ಭಾಗದ ರೈತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.