ಯಲಬುರ್ಗಾ: ತಾಲ್ಲೂಕಿನ ಬೇವೂರು ಗ್ರಾಮದಲ್ಲಿ ಮಹಿಳಾ ಗ್ರಾಮಸಭೆ ಹಮ್ಮಿಕೊಳ್ಳಲಾಗಿತ್ತು. ಚಾಲನೆ ನೀಡಿದ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ ಮಾತನಾಡಿ, ‘ಉದ್ಯೋಗ ಖಾತ್ರಿ ಸೇರಿದಂತೆ ಸರ್ಕಾರದ ಅನೇಕ ಯೋಜನೆಗಳು ಮಹಿಳೆಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿವೆ, ಇವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದರು.
‘ಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ಸಾಕಷ್ಟು ಅವಕಾಶಗಳಿವೆ. ಪುರುಷರಿಗೆ ಕೊಡುವ ಕೂಲಿಯಷ್ಟೇ ವಿತರಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಸಲುವಾಗಿ ಸ್ತ್ರೀ ಚೇತನ ಅಭಿಯಾನ ಹಾಗೂ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದರು.
‘ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು. ಶಿಕ್ಷಣ ಪಡೆಯುವುದು ಮಕ್ಕಳ ಹಕ್ಕು. ಇದನ್ನು ಯಾವುದೇ ಕಾರಣಕ್ಕೂ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿಗಳೂ ಮಹಿಳಾ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದು ಹೇಳಿದರು.
‘ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆ ತುಂಬಾ ಅನುಕೂಲವಾಗಿದೆ. ಮಹಿಳಾ ಸ್ವಸಹಾಯ ಸಂಘದವರಿಗೆ ಈ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ದೊರೆಯಲಿದೆ. ಇದರಿಂದ ಆರ್ಥಿಕ ಅಭಿವೃದ್ಧಿ ಕೈಗೊಳ್ಳಲು ಸಾಧ್ಯವಿದೆ’ ಎಂದರು.
ಪಂಚಾಯಿತಿ ಅಧ್ಯಕ್ಷೆ ಅಂದಮ್ಮ ಬಳಿಗಾರ, ಉಪಾಧ್ಯಕ್ಷೆ ಲಕ್ಷಮ್ಮ, ಪಿಡಿಒ ಅಬ್ದುಲ್ ಗಫಾರ ಹಾಗೂ ಸದಸ್ಯರು, ಕೂಲಿ ಕಾರ್ಮಿಕರು ಹಾಗೂ ವಿವಿಧ ಸ್ವಸಹಾಯ ಸಂಘದ ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.