ADVERTISEMENT

ಅತಿಥಿ ಉಪನ್ಯಾಸಕರ ನೇಮಿಸಲು ಒತ್ತಾಯ:ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 6:18 IST
Last Updated 28 ಸೆಪ್ಟೆಂಬರ್ 2025, 6:18 IST
ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಕೊಪ್ಪಳದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು
ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಕೊಪ್ಪಳದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು   

ಕೊಪ್ಪಳ: ಒಂದೂ ತರಗತಿ ನಡೆಯದಿದ್ದರೂ ಸರ್ಕಾರಿ ಕಾಲೇಜುಗಳಲ್ಲಿ ಸೆಮಿಸ್ಟರ್‌ ಪರೀಕ್ಷೆ ನಡೆಸಲು ಸಿದ್ಧತೆ ಮಾಡಲಾಗುತ್ತಿದೆ. ಖಾಸಗಿ ಕಾಲೇಜುಗಳಲ್ಲಿ ಉತ್ತಮವಾಗಿ ಪಾಠ ನಡೆಯುತ್ತಿವೆ. ಸರ್ಕಾರ ಸಾಕಷ್ಟು ತಾರತಮ್ಯ ನಡೆಸುತ್ತಿದ್ದು, ಇದನ್ನು ತಕ್ಷಣವೇ ನಿಲ್ಲಿಸಬೇಕು; ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿದರು. 

ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಪದವಿ ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ತರಗತಿ ಬಹಿಷ್ಕರಿಸಿ ಸರ್ಕಾರದ ಧೋರಣೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಎಐಡಿಎಸ್‌ಒ ರಾಜ್ಯ ಸಮಿತಿ ಸದಸ್ಯೆ ಸಿಂಧೂ. ಕೆ ಮಾತನಾಡಿ ‘ಹೋರಾಟದ ಮುಂದಿನ ನಡೆಯಾಗಿ ತರಗತಿ ನಡೆಸದೆ ಪರೀಕ್ಷೆ ಬೇಡ ಎಂಬ ಘೋಷವಾಕ್ಯದೊಂದಿಗೆ ರಾಜ್ಯದಾದ್ಯಂತ ಹೋರಾಟ ನಡೆಸಲು ವಿದ್ಯಾರ್ಥಿಗಳು ತರಗತಿ ಬಹಿಷ್ಕಾರ ಮಾಡಲಾಗಿದೆ. ಒಂದೂ ತರಗತಿ ನಡೆಯದಿದ್ದರೂ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆ ಹೊರಡಿಸಿರುವ ವಿಶ್ವವಿದ್ಯಾಲಯಗಳ ಧೋರಣೆ ಸರಿಯಲ್ಲ’ ಎಂದರು.

ADVERTISEMENT

‘ಸರ್ಕಾರಿ ವಿಶ್ವವಿದ್ಯಾಲಯಗಳು ಖಾಸಗಿ ಪದವಿ ಕಾಲೇಜುಗಳಿಗೆ ಮಾತ್ರವೇ ಇರುವುದೇ ಎಂಬ ಪ್ರಶ್ನೆ ಮೂಡುತ್ತದೆ. ಆದ್ದರಿಂದ ನಮ್ಮ ಹೋರಾಟ ಮುಂದುವರೆಯುತ್ತದೆ’ ಎಂದರು.

ಕಾರ್ಯಕರ್ತರಾದ ಶರಣು, ತಿರುಪತಿ, ಅಪ್ಪಾಜಿ, ವಿದ್ಯಾರ್ಥಿಗಳಾದ ಆಕಾಶ್,  ಪರಶುರಾಮ್, ಸಾವಿತ್ರಿ, ದುರ್ಗಾ, ನಾಗರತ್ನ ಮತ್ತು ಗಂಗಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.