ಯಲಬುರ್ಗಾ: ‘ಮಾನವ ಕಳ್ಳಸಾಗಣಿಗೆ ಚಟುವಟಿಕೆಯು ಕಾನೂನಿನ ಉಲ್ಲಂಘನೆಯಾಗಿದ್ದು, ಇದರ ವಿರುದ್ಧ ವಿಶ್ವ ಸಂಸ್ಥೆ ಹಾಗೂ ವಿವಿಧ ದೇಶದ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿಗೊಳಿಸುವ ಮೂಲಕ ನಿಯಂತ್ರಣಕ್ಕೆ ಶ್ರಮಿಸುತ್ತಿವೆ’ ಎಂದು ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಬೇಲೇರಿ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ವಕೀಲರ ಸಂಘ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಶಿಕ್ಷಣ ಇಲಾಖೆ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
‘ಮಹಿಳೆಯರನ್ನು, ಮಕ್ಕಳನ್ನು ಅಪಹರಿಸಿ ವಿವಿಧ ಅಕ್ರಮ ಚಟುವಟಿಕೆಗಳಿಲ್ಲಿ ಭಾಗಿಯಾಗುವಂತೆ ಒತ್ತಾಯಿಸುವ ಪ್ರಕರಣಗಳು ಜಾಗತಿಕ ಮಟ್ಟದಲ್ಲಿ ಆಗಾಗ ನಡೆಯುತ್ತಿವೆ. ಮೋಸದಿಂದ ಕರೆದುಕೊಂಡು ಹೋಗಿ ವಂಚಿಸುವುದು, ಮಕ್ಕಳನ್ನು ಮಹಿಳೆಯರನ್ನು ಪುಸಲಾಯಿಸಿ ಅಕ್ರಮಗಳಲ್ಲಿ ತೊಡಗುವಂತೆ ಮಾಡುವುದು ಹೀಗೆ ವಿವಿಧ ರೀತಿಯಲ್ಲಿ ಮಾನವರನ್ನು ದುರ್ಬಳಕೆ ಮಾಡುವ ಕೃತ್ಯಗಳ ವಿರುದ್ಧ ಕಾನೂನಿನ ಅಡಿಯಲ್ಲಿ ಅಡಿವಾಣ ಹಾಕುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವುದೇ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ’ ಎಂದು ಹೇಳಿದರು.
ಚಾಲನೆ ನೀಡಿದ ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರ ಮಾತನಾಡಿದರು. ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ ಅವರು ಮಕ್ಕಳ ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಹಿರಿಯ ವಕೀಲ ಜಗದೀಶ್ ಅಂಗಡಿ ಮಾತನಾಡಿದರು. ಮುಖ್ಯಶಿಕ್ಷಕ ವೀರನಗೌಡ ಪಾಟೀಲ, ಶಿಕ್ಷಣ ಸಂಯೋಜಕ ಬಸವರಾಜ ಅಂಗಡಿ, ಶಿಕ್ಷಕ ಶರಣಪ್ಪ ಕೊಪ್ಪದ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.