ಕೊಪ್ಪಳ: ‘ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ನಡೆಸಿದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಜಿಲ್ಲೆಯು ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದ್ದು, ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಬೇಕು. ಬ್ರ್ಯಾಂಡ್ ಕೊಪ್ಪಳ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಗೆ ದೇಶಿಯ ಮತ್ತು ವಿದೇಶಿಯ ಪ್ರವಾಸಿಗರನ್ನು ಸೆಳೆಯುವ ಕೆಲಸವಾಗಬೇಕು. ಈ ಬಗ್ಗೆ ಜಿಲ್ಲೆಯ ಐತಿಹಾಸಿಕ ತಾಣಗಳನ್ನು ವೆಬ್ ಸೈಟ್ ಅಥವಾ ಆನ್‌ಲೈನ್ ಮೂಲಕ ಹೆಚ್ಚಿನ ಪ್ರಚಾರಪಡಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು’ ಎಂದು ನಿರ್ದೇಶನ ನೀಡಿದರು.
‘ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಸುಪ್ರಸಿದ್ಧ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳಾದ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನ, ಕನಕಗಿರಿಯ ಕನಕಾಚಲಪತಿ ದೇವಸ್ಥಾನದ, ಹಿರೇಬೇಣಕಲ್ ಗ್ರಾಮದ ಮೋರೆರ್ ಬೆಟ್ಟ, ಇಟಗಿಯ ಮಹಾದೇವ ದೇವಾಲಯ, ಕೊಪ್ಪಳ ಕೋಟೆ, ಹುಲಿಕೆರೆ ಅಭಿವೃದ್ಧಿ ಕಾಮಗಾರಿಗಳು ತ್ವರಿತಗತಿಯಲ್ಲಿ ಆಗಬೇಕು’ ಎಂದು ಸೂಚಿಸಿದರು.
‘ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಗುರುತಿಸಬೇಕು, ಅವುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ₹100 ಕೋಟಿ ಅನುದಾನದಲ್ಲಿ ಅಂಜನಾದ್ರಿಯಲ್ಲಿ ಪ್ರವಾಸಿ ಮಂದಿರ ನಿರ್ಮಾಣ, ಶಾಪಿಂಗ್ ಕಾಂಪ್ಲೆಕ್ಸ್ ಶೌಚಾಲಯ ನಿರ್ಮಾಣ, ಪ್ರದಕ್ಷಿಣಾ ಪಥ ಹಾಗೂ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಎಲ್ಲಾ ಕಾಮಗಾರಿಗಳ ಪ್ರಗತಿಗೆ ವೇಗ ನೀಡಬೇಕು. ಜೊತೆಗೆ ಇತರೆ ಕಾಮಗಾರಿಗಳಿಗೂ ಸರ್ಕಾರ ಮತ್ತೆ ₹100 ಕೋಟಿ ನೀಡಿದ್ದು, ಯೋಜನಾ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ, ಅನುಮೋದನೆ ಪಡೆಯಬೇಕಿದೆ’ ಎಂದು ಹೇಳಿದರು.
‘ಹಿರೇಬೆಣಕಲ್ ಗ್ರಾಮದ ಮೋರೆರ ಬೆಟ್ಟದ ಸುತ್ತಮುತ್ತಲಿನ ಪ್ರದೇಶವು ಭಾರತೀಯ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತ, ಅರಣ್ಯ ಇಲಾಖೆಗೆ ಒಳಪಟ್ಟಿದ್ದು, ಈ ಬೆಟ್ಟದ ಅಭಿವೃದ್ಧಿ ದೃಷ್ಠಿಯಿಂದ ಈ ಬೆಟ್ಟಕ್ಕೆ ತೆರಳಲು ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದು. ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಸೈನೇಜ್ ಮತ್ತು ಹೋರ್ಡಿಂಗ್ ಅಳವಡಿಕೆ, ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ನಿರ್ಮಾಣ ಮಾಡಲು ಯೋಜನಾ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯಾ ಚತುರ್ವೇದಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಡಿ.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಮತ್ತು ಕಾಮಗಾರಿಗಳ ಅನುಷ್ಠಾನ ಏಜೆನ್ಸಿಯವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.