ADVERTISEMENT

ಅಸ್ಪೃಶ್ಯತೆ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಸಲು ಸೂಚನೆ: ಎಂ.ಸುಂದರೇಶ್ ಬಾಬು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 15:28 IST
Last Updated 23 ಸೆಪ್ಟೆಂಬರ್ 2022, 15:28 IST

ಕೊಪ್ಪಳ: ‘ಜಿಲ್ಲೆಯಲ್ಲಿ ಅಸ್ಪೃಶ್ಯತೆ ಕಂಡುಬರುವ ಪ್ರದೇಶಗಳಲ್ಲಿ ಅದರ ವಿರುದ್ಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಚೆಗೆ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ ‘ಜಿಲ್ಲೆಯಲ್ಲಿ ಎಸ್.ಸಿ. ಹಾಗೂ ಎಸ್.ಟಿ ಜನಾಂಗದವರ ಮೇಲಾಗುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಗ್ರಾಮ ಮಟ್ಟದಿಂದ ಜಾಗೃತಿ ಮೂಡಿಸುವ ಅಗತ್ಯವಿದೆ. ಘಟನೆ ನಡೆಯುವ ಪ್ರದೇಶಗಳನ್ನು ಗುರುತಿಸಿ, ಆ ಪ್ರದೇಶಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನಿಗಾವಹಿಸಬೇಕು’ ಎಂದರು.

‘ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿರುವ ಪ್ರದೇಶಗಳಿಗೆ ವಾರಕ್ಕೊಮ್ಮೆ ಪೊಲೀಸ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಬೇಕು. ಈ ಬಗ್ಗೆ ಗ್ರಾಮ ಮಟ್ಟದಿಂದ ನಿಯಂತ್ರಣಕ್ಕೆ ಮುಂದಾಗಬೇಕಾಗಿದ್ದು, ಗ್ರಾಮ ಪಂಚಾಯತಿ ಅಧಿಕಾರಿಗಳಿಂದ ದೌರ್ಜನ್ಯ ಪ್ರಕರಣಗಳ ಮಾಹಿತಿ ಸಂಗ್ರಹಣೆಯನ್ನು ಮಾಡಬೇಕು. ದೌರ್ಜನ್ಯ ಪ್ರಕರಣಗಳ ಹತೋಟಿಗೆ ತರುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು‘ ಎಂದು ಸಲಹೆ ನೀಡಿದರು.

ADVERTISEMENT

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದಪ್ಪ ‘2022ನೇ ಕ್ಯಾಲೆಂಡರ್ ವರ್ಷದಲ್ಲಿ ಜಿಲ್ಲೆಯಲ್ಲಿ ಒಟ್ಟು 55 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 54 ಪ್ರಕರಣಗಳಲ್ಲಿ ₹60.12 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವೈ.ಕಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದಾ ಮಳಗಿ ಸೇರಿದಂತೆ ಜಿಲ್ಲೆಯ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.