ಕನಕಗಿರಿ: ‘ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಲು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರೂ ತಾಲ್ಲೂಕಿನಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿರುವುದು ಕಂಡುಬಂದಿದೆ. ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು’ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರು ಸೂಚಿಸಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು, ಬಾಲ್ಯ ವಿವಾಹ ಮತ್ತು ಇತರೆ ವಿಷಯಗಳ ಕುರಿತು ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದರು.
‘ತಾಲ್ಲೂಕಿನ ಎಲ್ಲಾ ವಲಯಗಳು ಹಾಗೂ ಗ್ರಾಮಮಟ್ಟದಲ್ಲಿರುವ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮಗಳ ಮೂಲಕ ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದರು.
ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ರಾಜಶೇಖರ ಕೆ.ಮಾತನಾಡಿ,‘ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಬಾಲ್ಯ ವಿವಾಹ ಅಧಿಕಾರಿಗಳು ತಾಲ್ಲೂಕಿನಲ್ಲಿ ಬಾಲ್ಯ ವಿವಾಹ ನಡೆಯದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.
‘ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಂಡು ಸಮಸ್ಯೆಯಾಗದಂತೆ ಕ್ರಮವಹಿಸಬೇಕು’ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ, ಹನುಮಂತಪ್ಪ, ರವಿಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚಂದ್ರಕಲಾ ಸೇರಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.