ಕೊಪ್ಪಳದಲ್ಲಿ ಯೋಗ ದಿನಾಚರಣೆ
ಕೊಪ್ಪಳ: ಸಾವಿರಾರು ಜನ ಒಂದೇ ಬಾರಿಗೆ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಯೋಗ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದರು.
ಯೋಗ ದಿನದ ಅಂಗವಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಆಯುಷ್ ಇಲಾಖೆ ಆನ್ ಲೈನ್ ಮೂಲಕ 30 ದಿನ ಯೋಗಾ ಚಾಲೆಂಜ್ ಹಮ್ಮಿಕೊಂಡಿತ್ತು. ಅದರಲ್ಲಿ ಪಾಲ್ಗೊಂಡಿದ್ದ ಜನ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ ಯೋಗ ದೈಹಿಕ ವ್ಯಾಯಾಮ ಮಾತ್ರವಲ್ಲ, ಮಾನಸಿಕ ಆರೋಗ್ಯಕ್ಕೂ ಉತ್ತಮ. ಯೋಗ ಭಾರತದ ಸಂಸ್ಕ್ರತಿಯ ಅವಿಭಾಜ್ಯ ಅಂಗವಾಗಿದೆ. ಜಗತ್ತಿನ ಸಾಕಷ್ಟು ರಾಷ್ಟ್ರಗಳು ಒಂದೇ ದಿನ ಯೋಗ ದಿನ ಆಚರಿಸುತ್ತಿರುವುದನ್ನು ನೋಡಿದರೆ ನಮ್ಮ ಋಷಿಮುನಿಗಳ ಶಕ್ತಿ ಎಂತದ್ದು ಎನ್ನುವುದು ಗೊತ್ತಾಗುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ ಯೋಗ ಪಾಶ್ಚಾತ್ಯ ದೇಶಗಳಲ್ಲಿ ಪ್ರವರ್ಧಮಾನಕ್ಕೆ ಬಂದಿದ. ಯೋಗ ಯಾಕೆ ಬೇಕು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಜಗತ್ತಿಗೆ ಹೇಳಿಕೊಟ್ಟಿದ್ದಾರೆ. ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮ ಎಂದರು.
ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಮಾತನಾಡಿ ಮಕ್ಕಳು ಬುದ್ದಿವಂತರಿದ್ದಾರೆ. ಅದರೆ ಮಾನಸಿಕ ಶಕ್ತಿ ಕಡಿಮೆ ಇದೆ. ಯೋಗ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಎಲ್ಲರೂ ನಿತ್ಯ ಯೋಗ ಮಾಡಿ ಎಂದು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಆಯುಷ್ ಇಲಾಖೆ ಅಧಿಕಾರಿ ಪರ್ವತಗೌಡ ಹಿರೇಗೌಡ್ರ, ಡಿಡಿಪಿಐ ಶ್ರೀಶೈಲ ಬಿರಾದಾರ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.