ADVERTISEMENT

ಕೊಪ್ಪಳ: ಕನಕದಾಸರ ಮೂರ್ತಿ ಭಗ್ನ; ಹಾಲುಮತ ಸಮಾಜದ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 14:16 IST
Last Updated 25 ಜೂನ್ 2025, 14:16 IST
   

ಕಾರಟಗಿ (ಕೊಪ್ಪಳ ಜಿಲ್ಲೆ): ಗ್ರಾಮದ ವೃತ್ತದಲ್ಲಿರುವ ಕನಕದಾಸ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ತಾಲ್ಲೂಕಿನ ಬೇವಿನಾಳ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ.

ಕಿಡಿಗೇಡಿಗಳು ಕನಕದಾಸರ ಮೂರ್ತಿಯ ಬಲಗೈಯನ್ನು ತುಂಡರಿಸಿದ್ದು, ತಂಬೂರಿಯನ್ನು ಕಿತ್ತುಕೊಂಡು  ಪರಾರಿಯಾಗಿದ್ದಾರೆ. ಅಮಾವಾಸ್ಯೆ ನಿಮಿತ್ತ ಬುಧವಾರ ಮೂರ್ತಿಗೆ ಪೂಜೆ ಸಲ್ಲಿಸಲು ತೆರಳಿದಾಗ, ಮೂರ್ತಿ ಭಗ್ನಗೊಂಡಿರುವುದು ಬೆಳಕಿಗೆ ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಜಮಾವಣೆಗೊಂಡ ಹಾಲುಮತ ಸಮಾಜದವರು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಎಂ. ಕುಮಾರಸ್ವಾಮಿ, ಪೊಲೀಸ್‌ ಇನ್‌ಸ್ಪೆಕ್ಟರ್‌ ಸುಧೀರಕುಮಾರ ಬೆಂಕಿ, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 

ADVERTISEMENT

ಕನಕದಾಸರ ಮೂರ್ತಿಯನ್ನು ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕುರುಬ ಸಮಾಜದ ಪ್ರತಿನಿಧಿಗಳು ಒತ್ತಾಯಿಸಿದರು. ತನಿಖೆ ನಡೆಸಿ, ಕಿಡಿಗೇಡಿಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಸಭೆ: ಗುರುವಾರ ಕುರುಬ ಸಮಾಜದವರ ಸಭೆಯನ್ನು ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಘಟನೆಯ ಬಗ್ಗೆ ಚರ್ಚೆ ನಡೆಸಿ, ತಹಶೀಲ್ದಾರ್‌ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಮಾಜದ ಮುಖಂಡ ಕರಡಿ ಶರಣಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.