ADVERTISEMENT

ಸೋಂಕು ತಗ್ಗಿಸಲು ಜವಾಬ್ದಾರಿಯಿಂದ ಕರ್ತವ್ಯ ಮಾಡಿ

ಕೆಡಿಪಿ ಸಭೆಯಲ್ಲಿ ಸಮಸ್ಯೆ ಹೇಳಿಕೊಂಡ ಶಾಸಕರು

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 0:58 IST
Last Updated 12 ಸೆಪ್ಟೆಂಬರ್ 2020, 0:58 IST
ಕೊಪ್ಪಳದ ಜಿಲ್ಲಾ ಪಂಚಾಯಿತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ ಮಾತನಾಡಿದರು
ಕೊಪ್ಪಳದ ಜಿಲ್ಲಾ ಪಂಚಾಯಿತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ ಮಾತನಾಡಿದರು   

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹಾಗೂ ಸೋಂಕಿನಿಂದ ಮರಣ ಹೊಂದುವವರ ಪ್ರಮಾಣ ಕಡಿಮೆ ಮಾಡುವುದರಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದಎಲ್ಲ ಇಲಾಖೆಗಳ ಅಧಿಕಾರಿಗಳು ಇನ್ನೂ ಹೆಚ್ಚಿನ ಜವಾಬ್ದಾರಿಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿಶುಕ್ರವಾರ ನಡೆದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳು ಆಕ್ಸಿಜನ್ ಕೊರತೆ ಹಾಗೂ ಅಗತ್ಯ ಚಿಕಿತ್ಸೆಯ ಕೊರತೆಯಿಂದ ಸಾವನ್ನಪ್ಪುತ್ತಿದ್ದಾರೆ ಎಂಬ ದೂರುಗಳಿವೆ. ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸರ್ಕಾರದಿಂದ ಅಗತ್ಯ ಅನುದಾನ ನೀಡಲಾಗಿದ್ದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವೈದ್ಯರು, ಜಿಲ್ಲಾಡಳಿತ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಇದರಿಂದ ಜಿಲ್ಲೆಯಲ್ಲಿ ಸೋಂಕು ಹಾಗೂ ಮರಣ ಪ್ರಮಾಣ ಹೆಚ್ಚಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆಯಿಂದ ರೋಗಿಗಳು ಆಸ್ಪತ್ರೆ ಆವರಣದಲ್ಲಿಯೇ ಮರಣ ಹೊಂದುತ್ತಿದ್ದಾರೆ ಎಂದು ಜಿಲ್ಲೆಯ ಶಾಸಕರು, ಸಾರ್ವಜನಿಕರು ಆರೋಪಿಸಿದ್ದಾರೆ. ಇದಕ್ಕೆ ವೈದ್ಯಾಧಿಕಾರಿಗಳು ಉತ್ತರ ನೀಡಬೇಕು ಎಂದರು.

ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ವಹಣೆ, ಸ್ವಚ್ಛತೆ, ಸೂಕ್ತ ಚಿಕಿತ್ಸೆ ಹಾಗೂ ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು. ಮುಂದಿನ 24 ಗಂಟೆಗಳಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕ ಹಾಲಪ್ಪ ಆಚಾರ ಮಾತನಾಡಿವೆಂಟಿಲೇಟರ್ ಕೊರತೆಯಿಂದ ಯಲಬುರ್ಗಾ ತಾಲ್ಲೂಕಿನಲ್ಲಿ ಅನೇಕರು ಮರಣ ಹೊಂದಿದ್ದಾರೆ ಎಂದು ವಿಷಾದದಿಂದ ಹೇಳಿದರು. ಇದಕ್ಕೆ ಸಚಿವರುಗ್ರಾಮೀಣ ಭಾಗಗಳಲ್ಲಿ ಬಹುತೇಕ ಜನರು ಮಾಸ್ಕ್ ಧರಿಸುವುದಿಲ್ಲ.ವೈಯಕ್ತಿಕ ಅಂತರ ಕಾಯ್ದುಕೊಳ್ಳುವುದಿಲ್ಲ. ಇದರಿಂದ ಸೋಂಕು ಹರಡುವಿಕೆ ಹೆಚ್ಚಾಗುತ್ತದೆಎಂದು ಉತ್ತರಿಸಿದರು.

ಗ್ರಾಮೀಣ ಭಾಗದಲ್ಲಿ ಸುಟ್ಟು ಹೋದ ಅಥವಾ ದುರಸ್ಥಿಗೆ ಬಂದಿರುವ ವಿದ್ಯುತ್ ಪರಿವರ್ತಕಗಳ ದುರಸ್ಥಿ ಹಾಗೂ ಬದಲಿವಿದ್ಯುತ್ ಪರಿವರ್ತಕ ಅಳವಡಿಸಲು ಜೆಸ್ಕಾಂ ಇಲಾಖೆಯವರು ಕೂಡಲೇ ಕ್ರಮ ವಹಿಸಬೇಕು ಎಂದರು.

ನಿಗಮದ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ ಫಲಾನುಭವಿಗೆ ಉಂಟಾದ ತೊಂದರೆಯನ್ನು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಚಿವರಿಗೆ ವಿವರಿಸಿದರು.

ಜಿಲ್ಲೆಯಲ್ಲಿ ರಸಗೊಬ್ಬರಗಳ ವಿತರಣೆ ಸಮರ್ಪಕವಾಗಿ ಆಗುತ್ತಿಲ್ಲ ಎಂದು ಜಿಲ್ಲೆಯ ಎಲ್ಲ ಶಾಸಕರು ಆರೋಪಿಸಿದರು.

ಜಿಲ್ಲೆಯಲ್ಲಿ ಅಕ್ರಮ ಪಡಿತರ ಹಾಗೂ ಅಕ್ರಮ ಅಕ್ಕಿ ದಾಸ್ತಾನು ಕುರಿತು ಪ್ರಕರಣ ಕಂಡುಬರುತ್ತಿವೆ. ಈ ಕುರಿತು ಆಹಾರ ಇಲಾಖೆ ಅಧಿಕಾರಿಗಳು ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳೊಂದಿಗೆ ದಾಳಿ ನಡೆಸಿ ಅಕ್ರಮ ದಾಸ್ತಾನನ್ನು ಜಪ್ತಿ ಮಾಡಿ. ಗಂಗಾವತಿ ತಾಲ್ಲೂಕಿನಲ್ಲಿನ ಪ್ರಕರಣದ ಕುರಿತು ಒಂದು ವಾರದೊಳಗೆ ವರದಿನೀಡಿ ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್,ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳುಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.