ಕೊಪ್ಪಳ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು, ಶಂಕುಸ್ಥಾಪನೆ ನೆರವೇರಿಸಲು ಮತ್ತು ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ನೀಡುವ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಜಿಲ್ಲಾಕೇಂದ್ರಕ್ಕೆ ಬರಲಿದ್ದು, ಕಾಂಗ್ರೆಸ್ ಪಾಳಯದಲ್ಲಿ ಉತ್ಸಾಹ ಗರಿಗೆದರುವಂತೆ ಮಾಡಿದೆ.
ಕಾರ್ಯಕ್ರಮ ಬೆಳಿಗ್ಗೆ 11ಕ್ಕೆ ಆರಂಭವಾಗಲಿದ್ದು, ಸಿದ್ದರಾಮಯ್ಯ ಹಾಗೂ ಖರ್ಗೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಬರುವರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಕಾಮಗಾರಿಗಳು ನಡೆಯಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯಕ್ರಮ ಆಯೋಜಿಸಿವೆ. ಇದು ಸರ್ಕಾರಿ ಕಾರ್ಯಕ್ರಮವಾದರೂ ಕೊಪ್ಪಳದಲ್ಲಿ ಕಾಂಗ್ರೆಸ್ ನಾಯಕರ, ಕಾರ್ಯಕರ್ತರ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.
ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ಬಳಿಕ ಜಿಲ್ಲಾಕೇಂದ್ರದಲ್ಲಿ ಪಾಲ್ಗೊಳ್ಳುತ್ತಿರುವ ಮೊದಲ ವೇದಿಕೆ ಕಾರ್ಯಕ್ರಮ ಇದಾಗಿದೆ. ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿ ಪೇಸ್‌ಮೇಕರ್ ಅಳವಡಿಕೆ ಚಿಕಿತ್ಸೆಗೆ ಒಳಗಾಗಿರುವ ಖರ್ಗೆ ಅವರು ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್ ನಾಯಕರ ಹುಮ್ಮಸ್ಸು ಹೆಚ್ಚಿಸಿದೆ.
ಹಲವಾರು ಇಲಾಖೆಯಲ್ಲಿನ ಪ್ರಗತಿ ಯೋಜನೆಗಳಿಗೆ ಅನುದಾನ ಒದಗಿಸಲಾಗಿದೆ.
ಕೆಕೆಆರ್‌ಡಿಬಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಹಯೋಗದಲ್ಲಿ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಎಲ್ಲ ಏಳು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ₹306 ಕೋಟಿ ವೆಚ್ಚದಲ್ಲಿ 36 ವಸತಿ ನಿಲಯಗಳಿಗೆ ಅಡಿಗಲ್ಲು, 20 ಹೊಸ ವಸತಿ ನಿಲಯಗಳಿಗೆ ಅನುಮೋದನೆ ಹಾಗೂ ಇರುವ ಎಲ್ಲಾ ವಸತಿ ನಿಲಯಗಳಿಗೆ ಮೂಲ ಸವಲತ್ತು ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ದೊರಕಲಿದೆ.
ಕೊಪ್ಪಳದಲ್ಲಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆ ಸಾಮರ್ಥ್ಯದ ₹100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಜರುಗಲಿದೆ.
‘ಕೆಕೆಆರ್‌ಡಿಬಿಯಿಂದ ಕೊಪ್ಪಳ ಜಿಲ್ಲೆಗೆ ಆರೋಗ್ಯ ಅವಿಷ್ಕಾರದಲ್ಲಿ ₹319.76 ಕೋಟಿ, ಉದ್ಯೋಗ ಆವಿಷ್ಕಾರದಲ್ಲಿ ₹120 ಕೋಟಿ, ಕಲ್ಯಾಣ ಪಥದಲ್ಲಿ ₹121.55 ಕೋಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ₹18 ಕೋಟಿ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹6 ಕೋಟಿ, ಎಸ್‌ಸಿಎಸ್‌ಟಿ ಅಭಿವೃದ್ಧಿಗೆ ₹66 ಕೋಟಿ, ಪ್ರಜಾಸೌಧಕ್ಕೆ ₹45.75 ಕೋಟಿ ಅನುದಾನ ಒದಗಿಸಲಾಗಿದೆ’ ಎಂದು ಮಂಡಳಿಯ ಅಧ್ಯಕ್ಷ ಡಾ. ಅಜಯ ಸಿಂಗ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.