
ಕೊಪ್ಪಳ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಯ ಶಿಕ್ಷಣ ವಿವಿಧ ಯೋಜನೆಗಳ ಮೂಲಕ ಕಸರತ್ತು ನಡೆಸುತ್ತಿದ್ದು, ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಮಕ್ಕಳ ಓದಿಗೆ ಮೇಲೆ ಕಣ್ಗಾವಲು ಇರಿಸಿದ್ದಾರೆ.
ಮಂಗಳವಾರ ರಾತ್ರಿ ದಿಢೀರ್ ಆಗಿ ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಅವರು ಎಸ್‌ಎಸ್‌ಎಲ್‌ಸಿ ಮಕ್ಕಳ ಕಲಿಕಾ ಸಾಮರ್ಥ್ಯದ ಅಭಿವೃದ್ದಿಗಾಗಿ ನಡೆಸುತ್ತಿರುವ ಆನ್‌ಲೈನ್ ತರಗತಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಕುಳಿತು ಅವರು ತರಗತಿಗಳು ಹೇಗೆ ನಡೆಯುತ್ತಿವೆ ಎನ್ನುವುದನ್ನು ವೀಕ್ಷಿಸಿದರು. ನಂತರ ವಿದ್ಯಾರ್ಥಿನಿಯರ ಕುಂದುಕೊರತೆಗಳನ್ನು ವಿಚಾರಿಸಿ ಚೆನ್ನಾಗಿ ಓದಿ ಉತ್ತಮ ಅಂಕಗಳನ್ನು ಗಳಿಸಬೇಕು ಎಂದು ಕಿವಿಮಾತು ಹೇಳಿದರು.
ಅಡುಗೆ ಕೋಣೆಗೆ ತೆರಳಿ ಅಲ್ಲಿ ತರಕಾರಿ ಮತ್ತು ದವಸ ಧಾನ್ಯಗಳ ಪರಿಶೀಲನೆ ನಡೆಸಿ ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ನಿಯಮಿತವಾಗಿ ನೀಡಬೇಕು. ನಿಗದಿತ ಮೆನು ಪ್ರಕಾರ ಊಟ ಮತ್ತು ಉಪಹಾರ ನೀಡುವುದರ ಜೊತೆಗೆ ವಸತಿ ನಿಲಯದಲ್ಲಿ ಮಕ್ಕಳಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.
ಶಾಲಾ- ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಹಾಗೂ ವಸತಿ ನಿಲಯದ ಮೇಲ್ವಿಚಾರಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.