ADVERTISEMENT

ಕೊಪ್ಪಳ | ಅತಿಥಿ ಉಪನ್ಯಾಸಕರನ್ನು ಒದಗಿಸಲು ಒತ್ತಾಯ: ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 6:47 IST
Last Updated 5 ಸೆಪ್ಟೆಂಬರ್ 2025, 6:47 IST
ಕೊಪ್ಪಳದ ಅಶೋಕ ವೃತ್ತದಲ್ಲಿ ಪ‍್ರತಿಭಟಿಸಿದ ವಿದ್ಯಾರ್ಥಿಗಳು
ಕೊಪ್ಪಳದ ಅಶೋಕ ವೃತ್ತದಲ್ಲಿ ಪ‍್ರತಿಭಟಿಸಿದ ವಿದ್ಯಾರ್ಥಿಗಳು   

ಕೊಪ್ಪಳ: ಪದವಿ ವಿದ್ಯಾಲಯಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

‘ರಾಜ್ಯದಾದ್ಯಂತ ಪದವಿ ತರಗತಿಗಳು ಆರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿಲ್ಲ. ರಾಜ್ಯದ ಬಹುತೇಕ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೇ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕ ಎದುರಿಸುವಂತಾಗಿದೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸುತ್ತಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಪಾಠಗಳನ್ನು ಆಲಿಸದೆ ಪರೀಕ್ಷೆ ಎದುರಿಸಬೇಕಿದೆ. ಯುಜಿಸಿಯ ಹೊಸ ನಿರ್ದೇಶನಗಳ ಕುರಿತು ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಯುತ್ತಿರುವುದರಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ’ ಎಂದು ವಿದ್ಯಾರ್ಥಿ ಪ್ರಮುಖರು ತಿಳಿಸಿದರು.

‘ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ಸ್ಪಷ್ಟ ನಿರ್ದೇಶನವೇ ಇದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕಿದೆ. ಆ ಮೂಲಕ ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ತುರ್ತಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು, ವಿದ್ಯಾರ್ಥಿಗಳ ಗೊಂದಲವನ್ನು ಪರಿಹರಿಸಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಅಯ್ಯಾಳಪ್ಪ, ರಾಜ್ಯ ಸಮಿತಿ ಸದಸ್ಯೆ ಸಿಂಧು, ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ, ಜಿಲ್ಲಾ ಸಂಘಟನಕಾರ ಪ್ರದೀಪ್‌, ವಿದ್ಯಾರ್ಥಿಗಳಾದ ಶರಣಪ್ಪ, ಅಪ್ಪಾಜಿ, ಸಾವಿತ್ರಿ, ಲಕ್ಷ್ಮಿ, ತುಳಸಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.