ಕೊಪ್ಪಳ: ಜಿಲ್ಲೆಯಲ್ಲಿರುವ ಮಾಜಿ ದೇವದಾಸಿ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಿಂದ ಹೊರ ಉಳಿಯದಂತೆ ಸರಿಯಾಗಿ ಹಾಗೂ ನಿಖರವಾದ ಮಾಹಿತಿ ಸಂಗ್ರಹಿಸಿ ಸಮೀಕ್ಷೆ ಅಚ್ಚುಕಟ್ಟಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯ ಕುರಿತು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
‘ಕೊಪ್ಪಳದಲ್ಲಿನ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಯನ್ನು ಸೆ. 15ರಿಂದ 45 ದಿನಗಳ ಅವಧಿಯಲ್ಲಿ ಮಾಡಲಾಗುವುದು. ಜೊತೆಗೆ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯೂ 15 ರಿಂದಲೇ ನಡೆಯಲಿದೆ. 1993-94 ಮತ್ತು 2007-08ರಲ್ಲಿ ದೇವದಾಸಿಯರ ಸಮೀಕ್ಷೆಯನ್ನು ನಡೆಸಿದ್ದು, ಆ ಸಮೀಕ್ಷೆಯಲ್ಲಿ ಮಾಜಿ ದೇವದಾಸಿ ಮಹಿಳೆಯರು ಕೈಬಿಟ್ಟು ಹೋಗಿದ್ದಲ್ಲಿ ಈಗ ನಡೆಯುವ ಮರು ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕೊಪ್ಪಳ ಯೋಜನಾಧಿಕಾರಿ ಪೂರ್ಣಿಮಾ ಏಳುಬಾವಿ, ದೇವದಾಸಿ ಮಹಿಳೆಯರ ಮರು ಸಮೀಕ್ಷೆ ರಾಜ್ಯ ಸಮಿತಿ ಸದಸ್ಯ ಚಂದಾಲಿಂಗಪ್ಪ ಕಲಾಲಬಂಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.