
ಕೊಪ್ಪಳದ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ‘ಪ್ರಜಾವಾಣಿ’ ಹೊರತಂದ ತೋಟಗಾರಿಕಾ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕೊಪ್ಪಳ: ರಾಜ್ಯದ ಜನರಿಗೆ ಗವಿಸಿದ್ಧೇಶ್ವರ ಒಳ್ಳೆಯ ಆಶೀರ್ವಾದ ಮಾಡಿ, ಜನರು ನೆಮ್ಮದಿಯ ಬದುಕು ಕಟ್ಟಿಕೊಳ್ಳುವಂತಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.
ಜಾತ್ರೆಯ ಅಂಗವಾಗಿ ಗವಿಸಿದ್ಧೇಶ್ವರ ಮಠದ ತೇರು ಮೈದಾನದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕೆ ಇಲಾಖೆಯ ಫಲ-ಪುಷ್ಪ ಪ್ರದರ್ಶನ, ಕೃಷಿ ಇಲಾಖೆಯ ವಸ್ತುಪ್ರದರ್ಶನ ಮಳಿಗೆಗಳ ಉದ್ಘಾಟನೆ ಮತ್ತು ಅಕ್ಕ- ಪಡೆಯ ವಾಹನ ಹಾಗೂ ಸಾರಿಗೆ ಇಲಾಖೆಯ ನೂತನ ಐದು ಬಸ್‌ಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು ‘ಜಾತ್ರೆ ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ನಡೆಯುತ್ತಿದೆ. ಜಿಲ್ಲೆಯ ಜನರು ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಇಡೀ ರಾಜ್ಯದ ಜನರು ಈ ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಗವಿಸಿದ್ದೇಶ್ವರ ಎಲ್ಲಾ ಜನರಿಗೆ ವಿಶೇಷವಾಗಿ ರೈತರಿಗೆ ಒಳ್ಳೆಯದನ್ನು ಮಾಡಲಿ. ಒಳ್ಳೆಯ ಮಳೆ ಬೆಳೆಯಾಗಿ ರೈತರು ನೆಮ್ಮದಿಯಾಗಿ ಇರುವಂತಾಗಲಿ’ ಎಂದರು.
ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ ‘ಭಕ್ತರೇ ಬಂದು ಈ ಜಾತ್ರೆಯನ್ನು ಮಾಡುವುದರ ಜೊತೆಗೆ ಸತತ 15 ದಿನಗಳ ಕಾಲ ಉಚಿತ ದಾಸೋಹ ನಡೆಸುತ್ತಾರೆ’ ಎಂದರು.
ಸಂಸದ ಕೆ. ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಮಾಜಿ ಸಂಸದ ಸಂಗಣ್ಣ ಕರಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣ ಉಕ್ಕುಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿ.ಡಿ.ಕೃಷ್ಣಮೂರ್ತಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.