ADVERTISEMENT

ಕೊಪ್ಪಳ | ಗವಿಸಿದ್ಧೇಶ್ವರ ಮಠದ ಜಾತ್ರೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 7:26 IST
Last Updated 12 ಡಿಸೆಂಬರ್ 2025, 7:26 IST
ಕೊಪ್ಪಳದಲ್ಲಿ ಬುಧವಾರ ನಡೆದ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಮಾತನಾಡಿದರು   
ಕೊಪ್ಪಳದಲ್ಲಿ ಬುಧವಾರ ನಡೆದ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಮಾತನಾಡಿದರು      

ಕೊಪ್ಪಳ: ‘ಜಿಲ್ಲಾಕೇಂದ್ರದಲ್ಲಿರುವ ಗವಿಸಿದ್ಧೇಶ್ವರ ಮಠದ ಜಾತ್ರೆ ಜ.5ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಜಿಲ್ಲಾಡಳಿತದ ವತಿಯಿಂದಲೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾತ್ರೆಯ ಸಿದ್ಧತೆಗಳನ್ನು ಕುರಿತು ಚರ್ಚಿಸಲು ಜಿಲ್ಲಾಡಳಿತ ಭವನದಲ್ಲಿ ಗುರುವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಅವರು ‘ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ದವಾದ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.

‘ಜನರಿಗೆ ಕುಡಿಯುವ ನೀರು, ವಾಹನಗಳ ನಿಲುಗಡೆಗೆ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಒದಗಿಸಬೇಕು. ಜಾತ್ರೆಯು ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ಜರುಗುವಂತೆ ಜಿಲ್ಲಾಡಳಿತದಿಂದ ಸಕಲ ರೀತಿಯ ಸಹಕಾರ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡು ಸಮಿತಿ ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗುವುದು’ ಎಂದು ಹೇಳಿದರು.

ADVERTISEMENT

‘ಭಕ್ತರ ಸುರಕ್ಷತೆಗಾಗಿ ಸೂಕ್ತ ಪೊಲೀಸ್ ಭದ್ರತೆ ಜೊತೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಕ್ರಮ ವಹಿಸಬೇಕು. ಮಠದ ಆವರಣದಲ್ಲಿ ಆಂಬುಲೆನ್ಸ್‌ ಮತ್ತು ಅಗ್ನಿಶಾಮಕ ದಳದ ವಾಹನಗಳನ್ನು ಕಾಯ್ದಿರಿಸಬೇಕು. ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ ಸಂಚರಿಸಲು ಅನುಕೂಲವಾಗುವಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ನಿರಂತರ ದಾಸೋಹ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ನಗರಸಭೆಯ ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಪೌರ ಕಾರ್ಮಿಕರ ನಿಯೋಜನೆ, ಕುಡಿಯುವ ನೀರಿನ ಸೌಕರ್ಯಕ್ಕೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತ ಮಹೇಶ್ ಮಾಲಗಿತ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶ ಜಗದೀಶ, ಕೊಪ್ಪಳ ತಹಶೀಲ್ದಾರ್‌ ವಿಠ್ಠಲ್ ಚೌಗುಲಾ, ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮಹಾದಾಸೋಹಕ್ಕೆ ಶುದ್ಧ ಕುಡಿಯುವ ನೀರು ಆಹಾರ ಸುರಕ್ಷಾ ಅಧಿಕಾರಿಗಳು ಗವಿಮಠದ ಅಡುಗೆ ಸಿಬ್ಬಂದಿ ಜೊತೆ ವಿಶೇಷ ಸಭೆ ನಡೆಸಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ದೂಳು ಬಾರದಂತೆ ನಿಗಾ ವಹಿಸಬೇಕು.
ವರ್ಣಿತ್‌ ನೇಗಿ ಜಿಲ್ಲಾ ಪಂಚಾಯಿತಿ ಸಿಇಒ
ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ
ಕೊಪ್ಪಳ: ‘ಗವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವವು ಬಹುದೊಡ್ಡ ಪ್ರಮಾಣದಲ್ಲಿ ನಡೆಯುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್ ಅರಸಿದ್ದಿ ತಿಳಿಸಿದರು. ’ಸಂಚಾರ ದಟ್ಟಣೆ ಸಮಸ್ಯೆಯಾಗದಂತೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಿ ಅದರ ಮಾಹಿತಿಯನ್ನು ಮುಂಚಿತವಾಗಿ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು’ ಎಂದು ಹೇಳಿದರು.