ADVERTISEMENT

ಪರಿಶ್ರಮದಿಂದ ಗುರಿ ಮುಟ್ಟಲು ಸಾಧ್ಯ: ಸಚಿವ ಹಾಲಪ್ಪ ಆಚಾರ

ಪ್ರಯೋಗಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 7:26 IST
Last Updated 10 ಅಕ್ಟೋಬರ್ 2021, 7:26 IST
ಯಲಬುರ್ಗಾ ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮಾತನಾಡಿದರು. ತಹಶೀಲ್ದಾರ್ ಶ್ರೀಶೈಲ ತಳವಾರ, ಬಸಲಿಂಗಪ್ಪ ಭೂತೆ, ಸಿ.ಎಚ್. ಪೊಲೀಸ್‍ ಪಾಟೀಲ ಇದ್ದರು
ಯಲಬುರ್ಗಾ ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮಾತನಾಡಿದರು. ತಹಶೀಲ್ದಾರ್ ಶ್ರೀಶೈಲ ತಳವಾರ, ಬಸಲಿಂಗಪ್ಪ ಭೂತೆ, ಸಿ.ಎಚ್. ಪೊಲೀಸ್‍ ಪಾಟೀಲ ಇದ್ದರು   

ಯಲಬುರ್ಗಾ: ‘ಸ್ಪಷ್ಟವಾದ ಗುರಿಯನ್ನಿಟ್ಟುಕೊಂಡು ಸತತ ಪ್ರಯತ್ನದಿಂದ ಅದನ್ನು ಮುಟ್ಟಿ, ಜಗತ್ತಿಗೆ ಮಾದರಿಯಾಗುವ ಸಾಮರ್ಥ್ಯ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಇರುತ್ತದೆ. ಆದರೆ ದೃಢ ಸಂಕಲ್ಪದಿಂದ ಕಾರ್ಯಪ್ರವೃತ್ತರಾಗುವುದು ಮುಖ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು.

ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‍ಗೆ ಚಾಲನೆ ನೀಡಿ ಮಾತನಾಡಿದರು.

ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ನಿರಂತರ ಅಧ್ಯಯನ ಹಾಗೂ ಹೆಚ್ಚಿನ ಪರಿಶ್ರಮ ಅವಶ್ಯಕ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಶಿಕ್ಷಕರು ಹಾಗೂ ಪೋಷಕರು ಪ್ರೇರಣೆ ನೀಡಬೇಕು ಎಂದು ಕಿವಿ ಮಾತು ಹೇಳಿದರು.

ADVERTISEMENT

ಈ ವಸತಿ ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಹಾಗೆಯೇ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳು ಮಕ್ಕಳ ಬುದ್ಧಿಮಟ್ಟವನ್ನು ಹೆಚ್ಚಿಸುವುದರಿಂದ ಈ ವಿಷಯಗಳನ್ನು ಶಿಕ್ಷಕರು ಇಚ್ಛಾಶಕ್ತಿಯಿಂದ ಕಲಿಸಬೇಕು. ಮಕ್ಕಳಲ್ಲಿರುವ ವಿಶೇಷ ಪ್ರತಿಭೆಯನ್ನು ಗುರುತಿಸಿ ಅವರು ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯ ವಿರೂಪಾಕ್ಷಪ್ಪ ಹನಮಶೆಟ್ಟಿ ಮಾತನಾಡಿದರು.

ತಹಶೀಲ್ದಾರ್ ಶ್ರೀಶೈಲ ತಳವಾರ, ಗುರುರಾಜ ಛಲವಾದಿ, ಗ್ರಾ.ಪಂ. ಅಧ್ಯಕ್ಷೆ ಶಾರದಾ ಕೊಡತಗೇರಿ, ಉಪಾಧ್ಯಕ್ಷೆ ರೇಣುಕಾ ತೊಗರಿ, ಪ.ಪಂ. ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್.ಪೊಲೀಸ್ ಪಾಟೀಲ, ವೀರಣ್ಣ ಹುಬ್ಬಳ್ಳಿ, ಅಂದಾನಗೌಡ ಪೋಲೀಸ್ ಪಾಟೀಲ, ಪ್ರಭುರಾಜ ಕಲಬುರ್ಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.