ADVERTISEMENT

ಕೊಪ್ಪಳ: ಲೋಕಾಯುಕ್ತ ಅರ್ಜಿ ಶೀಘ್ರ ವಿಲೇವಾರಿಗೆ ಸೂಚನೆ

ಜಿಲ್ಲಾಕೇಂದ್ರಕ್ಕೆ ಮೂರು ದಿನ ಭೇಟಿ ನೀಡಲಿರುವ ಉಪಲೋಕಾಯುಕ್ತರು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 6:21 IST
Last Updated 19 ಅಕ್ಟೋಬರ್ 2025, 6:21 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

– ಪ್ರಜಾವಾಣಿ ಚಿತ್ರ

ಕೊಪ್ಪಳ: ಕರ್ನಾಟಕ ಲೋಕಾಯುಕ್ತದಲ್ಲಿ ದಾಖಲಾದ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳ ಅರ್ಜಿಗಳನ್ನು ಬಾಕಿ ಇಟ್ಟುಕೊಳ್ಳದೇ ಅವುಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ‘ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಅ. 29, 30 ಮತ್ತು 31ರಂದು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಕೈಗೊಂಡಿದ್ದಾರೆ. ಈ ಅವಧಿಯಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅ.30 ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ 31ರಂದು ಲೋಕಾಯುಕ್ತ ವ್ಯಾಪ್ತಿಯಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ’ ಎಂದು ತಿಳಿಸಿದರು.

‘ಉಪಲೋಕಾಯುಕ್ತರ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸ್ವಾಗತ ಸಮಿತಿ, ಶಿಷ್ಟಾಚಾರ, ವೇದಿಕೆ, ಆಹಾರ, ಸಾರಿಗೆ ಸಮಿತಿ ಸೇರಿದಂತೆ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಿ ಕಾರ್ಯ ಹಂಚಿಕೆ ಮಾಡಲಾಗಿದೆ. ಅದರಂತೆ ಎಲ್ಲಾ ಸಮಿತಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸನ್ಮಾನ್ಯರ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಉಪಲೋಕಾಯುಕ್ತರು ವಿವಿಧ ಸ್ಥಳಗಳಿಗೆ ಭೇಟಿ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದು, ಈ ಬಗ್ಗೆ ಜಿಲ್ಲೆಯಾದ್ಯಂತ ಪ್ರಚಾರ ಮಾಡಬೇಕು. ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಧ್ವನಿವರ್ದಕಗಳ ಮೂಲಕ ಬಸ್ ನಿಲ್ದಾಣಗಳಲ್ಲಿ ಅಗತ್ಯ ಜಾಗೃತಿ ಮೂಡಿಸಲಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಚಾರ ಮಾಡಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ಧಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.