ಕುಷ್ಟಗಿ: ತಾಲ್ಲೂಕಿನ ಹಿರೇಬನ್ನಿಗೋಳದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸೇರಿದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ಆಹಾರ ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆಗೆ ಸಂಬಂಧಿಸಿದಂತೆ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ ವಸತಿ ಶಾಲೆಯ ವಾರ್ಡನ್ ಹನುಮಂತಪ್ಪ ಎಂಬುವವರನ್ನು ಬೇರೆ ವಸತಿ ನಿಲಯಕ್ಕೆ ನಿಯೋಜನೆ ಮಾಡಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ‘ಶಾಲಾ ಮಕ್ಕಳಿಗೆ ಕಳಪೆ ಊಟದ ಭಾಗ್ಯ’ ಎಂಬ ‘ಪ್ರಜಾವಾಣಿ’ ವರದಿ ಉಲ್ಲೇಖಿಸಿದ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರ ಅನ್ವಯ ಕ್ರಮ ಕೈಗೊಂಡಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ ಅವರು ವಾರ್ಡನ್ ಹನುಮಂತಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಯಲಬುರ್ಗಾದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ತಾತ್ಕಾಲಿಕವಾಗಿ ವರ್ಗ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಅಲ್ಲದೆ ತೆರವಾಗಿರುವ ಹಿರೇಬನ್ನಿಗೋಳ ಮೊರಾರ್ಜಿ ದೇಸಾಯಿ ವಸತಿ ನಿಲಯದ ನಿರ್ವಹಣೆ, ಸಾರ್ವಜನಿಕ, ಶೈಕ್ಷಣಿಕ ಆಡಳಿತಾತ್ಮಕ ಹಿತದೃಷ್ಟಿಯಿಂದ ಅದೇ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಆನಂದ ಅವರಿಗೆ ಹೆಚ್ಚುವರಿಯಾಗಿ ಪ್ರಭಾರ ಅಧಿಕಾರ ವಹಿಸಿಕೊಳ್ಳುವಂತೆ ಆದೇಶದಲ್ಲಿ ವಿವರಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅಜ್ಮೀರ್ ಅಲಿ, ಹಿರೇಬನ್ನಿಗೋಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಆಹಾರದಲ್ಲಿನ ಸಮಸ್ಯೆಗೆ ಸಂಬಂಧಿಸಿದಂತೆ ದೂರುಗಳು ಬಂದಿವೆ. ಅಲ್ಲದೆ ಪ್ರಜಾವಾಣಿ ವರದಿ ಉಲ್ಲೇಖಿಸಿ ಇಲಾಖೆಯ ನಿರ್ದೇಶಕರಿಗೆ ವರದಿ ಸಲ್ಲಿಸಲಾಗಿದೆ. ಅಲ್ಲದೆ ವಾರ್ಡನ್ ಹನುಮಂತಪ್ಪ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ’ ಎಂದು ತಿಳಿಸಿದರು.
ಹಾಸ್ಟೆಲ್ ವಾರ್ಡನ್ ಬಗ್ಗೆ ದೂರುಗಳಿದ್ದರೂ ಬೇರೆ ನಿಲಯಕ್ಕೆ ನಿಯೋಜನೆ ಮಾಡಿದ್ದೇ ಪರಿಹಾರವಲ್ಲ. ತಕ್ಷಣ ಶಿಸ್ತುಕ್ರಮ ಜರುಗಿಸಬೇಕಿತ್ತು. ಇಲ್ಲದಿದ್ದರೆ ಸ್ವಯಂ ಪ್ರೇರಿತ ದೂರು ದಾಖಲಿಸಿ ವಿಚಾರಣೆ ನಡೆಸಿ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ.– ಶೇಖರಗೌಡ.ಜಿ.ರಾಮತ್ನಾಳ, ಸದಸ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.