ಪೊಲೀಸ್
(ಸಾಂದರ್ಭಿಕ ಚಿತ್ರ)
ಕೊಪ್ಪಳ: ನಗರದಲ್ಲಿ ವಿವಿಧೆಡೆ ತಪಾಸಣೆ ನಡೆಸಿದ ಅಧಿಕಾರಿಗಳು ಮೂವರು ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ 4 ಮಕ್ಕಳನ್ನು ನೇರವಾಗಿ ಮಕ್ಕಳು ಈ ಮೊದಲು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಗಳಿಗೆ ದಾಖಲಿಸಿದ್ದಾರೆ.
ತಪಾಸಣೆಗಳಲ್ಲಿ ಪತ್ತೆ ಹಚ್ಚಲಾದ ಬಾಲಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ದಾಖಲಿಸಲಾಗಿದೆ. ಈ ತಪಾಸಣಾ ಕಾರ್ಯದಲ್ಲಿ ಜಿಲ್ಲಾ ಮಟ್ಟದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ, ಕೊಪ್ಪಳ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ತಾಲ್ಲೂಕು ಮಟ್ಟದಲ್ಲಿ ಕಾರ್ಮಿಕ ನಿರೀಕ್ಷಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರು ಹಾಗೂ ಸಿಬ್ಬಂದಿ, ಪೊಲೀಸರು ಪಾಲ್ಗೊಂಡಿದ್ದರು.
ಇದೇ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯಡಿ ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ದಾಳಿ, ತಪಾಸಣೆ ಕಾರ್ಯಾಚರಣೆ ಮೂಲಕ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಅವರಿಗೆ ಪುನರ್ವಸತಿಗೊಳಿಸಲಾಯಿತು.
ಮಾಹಿತಿ ನೀಡಲು ಮನವಿ
ಕೊಪ್ಪಳ: ದಸರಾ ಕ್ರೀಡಾಕೂಟಗಳಲ್ಲಿ ಜಿಲ್ಲೆಯಿಂದ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ಪಾವತಿಯಾಗದಿದ್ದರೆ ಜಿಲ್ಲಾ ಕ್ರೀಡಾ ಇಲಾಖೆಗೆ ಮಾಹಿತಿ ನೀಡುವಂತೆ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಜಿಲ್ಲೆಯ ಕ್ರೀಡಾಪಟುಗಳಿಗೆ ಹಾಗೂ ಕೊಪ್ಪಳ, ಕಲಬುರಗಿ, ರಾಯಚೂರು, ಬಳ್ಳಾರಿ, ಬೀದರ್ ಯಾದಗಿರಿ ಜಿಲ್ಲೆಗಳಲ್ಲಿ ಜರುಗಿದ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕೊಪ್ಪಳ ಜಿಲ್ಲೆ ಪ್ರತಿನಿಧಿಸಿದವರಿಗೆ ಭತ್ಯೆ ನೀಡಲಾಗುತ್ತದೆ. ಸಿಗದವರು ಕಚೇರಿಯನ್ನು ಸಂಪರ್ಕಿಸಬೇಕು. ಇನ್ನಷ್ಟು ಮಾಹಿತಿಗೆ 08539-230121 ಕರೆ ಮಾಡಬಹುದು ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.