ಕೊಪ್ಪಳ: ‘ದೇಹದ ಅನೇಕ ಅಂಗಗಳಲ್ಲಿ ಕಣ್ಣುಗಳು ಮಹತ್ವವಾಗಿದ್ದು, ಅವುಗಳ ರಕ್ಷಣೆಗೆ ಆದ್ಯತೆ ಕೊಡಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜ್ ಟಿ. ಹೇಳಿದರು.
ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಶುಕ್ರವಾರ ಪತ್ರಕರ್ತರಿಗೆ ಕನ್ನಡಕ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಪತ್ರಕರ್ತರು ಸಮಾಜದ ಕಣ್ಣುಗಳು ಇದ್ದ ಹಾಗೆ. ನಮ್ಮ ಕೆಲಸದ ವೈಖರಿ, ಸಾಧನೆಗಳನ್ನು ಒರೆಗೆ ಹಚ್ಚುವ ಪತ್ರಕರ್ತರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಆದ್ದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಯಾವುದೇ ಸುದ್ದಿ ಬರೆಯಬೇಕಾದರೆ ಅದರ ಖಚಿತತೆ ಖಾತ್ರಿ ಪಡಿಸಿಕೊಳ್ಳಬೇಕು’ ಎಂದರು.
ಜಿಲ್ಲಾ ಅಂಧತ್ವ ನಿವಾರಣಾ ಅಧಿಕಾರಿ ಡಾ. ಪ್ರಕಾಶ ಎಚ್. ಮಾತನಾಡಿ ‘ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕೆಲಸ ಮಾಡಬೇಕು. ಸಾಮಾಜಿಕ ತಾಣಗಳಲ್ಲಿ ಹಂಚಿಕೆಯಾಗುವ ಆರೋಗ್ಯ ಸಲಹೆಗಳನ್ನು ಪಾಲಿಸುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳಬೇಕು’ ಎಂದು ಹೇಳಿದರು.
ಡಿಎಚ್‌ಒ ಕಚೇರಿ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಹಾಗೂ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಿಂದ ಪತ್ರಕರ್ತರಿಗೆ ಕಣ್ಣುಗಳ ತಪಾಸಣೆ ಮಾಡಿ ಹಾಗೂ ಕನ್ನಡಕ ವಿತರಣೆ ಮಾಡಲಾಯಿತು.
ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಎಂ.ಎಂ. ಜೋಶಿ ಆಸ್ಪತ್ರೆಯ ಪ್ರತಿನಿಧಿ ವಿಕ್ರಂ, ಕೊಪ್ಪಳ ಮೀಡಿಯಾ ಕ್ಲಬ್ ಅಧ್ಯಕ್ಷ ರವೀಂದ್ರ ವಿ.ಕೆ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.