ADVERTISEMENT

ಗೋಹತ್ಯೆ ನಿಷೇಧ ಕಾಯ್ದೆ ಜಾಗೃತಿ ಮೂಡಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಪಶುಸಂಗೋಪನಾ ಸಚಿವ ಪ್ರಭು ಚವಾಣ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 3:57 IST
Last Updated 2 ಸೆಪ್ಟೆಂಬರ್ 2021, 3:57 IST
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪಶು ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಪ್ರಭು ಚವಾಣ್ ಮಾತನಾಡಿದರು. ಶಾಸಕ ಪರಣ್ಣ ಮುನವಳ್ಳಿ, ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್, ಎಸ್‌ಪಿ ಟಿ.ಶ್ರೀಧರ್, ಸಿಇಒ ಫೌಜಿಯಾ ತರನ್ನುಮ್ ಇದ್ದರು
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪಶು ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಪ್ರಭು ಚವಾಣ್ ಮಾತನಾಡಿದರು. ಶಾಸಕ ಪರಣ್ಣ ಮುನವಳ್ಳಿ, ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್, ಎಸ್‌ಪಿ ಟಿ.ಶ್ರೀಧರ್, ಸಿಇಒ ಫೌಜಿಯಾ ತರನ್ನುಮ್ ಇದ್ದರು   

ಕೊಪ್ಪಳ: ‘ಗೋ ಹತ್ಯೆ ನಿಷೇಧ ಕಾಯ್ದೆ ಯ ಪರಿಣಾಮಕಾರಿ ಅನುಷ್ಠಾನದಲ್ಲಿ ಇಲಾಖೆ ಅಧಿಕಾರಿಗಳು ಮತ್ತು ಪಶುವೈದ್ಯರ ಪಾತ್ರ ಮುಖ್ಯವಾಗಿದ್ದು, ಈ ಕಾಯ್ದೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಗ್ರಾಮಸಭೆ ಮಾಡಿ, ರೈತರಿಗೆ ಜಾಗೃತಿ ಮೂಡಿಸಬೇಕು’ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವಾಣ್‌ ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನ ಹಾಗೂ ಪ್ರಾಣಿ ಕಲ್ಯಾಣ ಸಹಾಯವಾಣಿ (ವಾರ್ ರೂಮ್) ಮತ್ತು ಜಿಲ್ಲೆಯ ಪಶು ಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಗೋವುಗಳ ಸಂರಕ್ಷಣೆಯೇ ನಮ್ಮ ಸರ್ಕಾರದ ಉದ್ದೇಶವಾಗಿದ್ದು, ಇದಕ್ಕಾಗಿಯೇಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದೇವೆ. ಮೂಕಪ್ರಾಣಿ ರಕ್ಷಣೆ, ಕಸಾಯಿಖಾನೆಗೆ ಹೋಗದಂತೆ ತಡೆಯುವ ಕಾರಣ ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಇಲಾಖೆಯ ಅಧಿಕಾರಿಗಳು ಮತ್ತು ಪಶುವೈದ್ಯರು ಜಾರಿಗೆ ತಂದು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಬಕ್ರೀದ್ ಸಮಯದಲ್ಲಿ ಪಶು, ಕಂದಾಯ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ 6 ರಿಂದ 7 ಸಾವಿರ ಜಾನುವಾರುಗಳನ್ನು ರಾಜ್ಯದಲ್ಲಿ ರಕ್ಷಣೆ ಮಾಡಿದ್ದೇವೆ’ ಎಂದರು.

ADVERTISEMENT

’ಗೋವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೊಂದು ಗೋಶಾಲೆ ಸ್ಥಾಪಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಪ್ರಾಣಿಗಳಿಗೂ ತುರ್ತು ಚಿಕಿತ್ಸೆ ಒದಗಿಸಲು ಪಶು ಸಂಜೀವಿನಿಅಂಬುಲನ್ಸ್ ಜಾರಿಗೆ ತರಲಾಗಿದ್ದು, 1962 ಕ್ಕೆ ಕರೆ ಮಾಡಿ ಸೇವೆ ಪಡೆಯಬಹುದು ಎಂದರು. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಖಾಸಗಿ ಗೋಶಾಲೆಗಳು ಜಾನುವಾರುಗಳ ರಕ್ಷಣೆಯ ಉತ್ತಮ ಕಾರ್ಯ ಮಾಡುತ್ತಿದ್ದು, ಅವುಗಳಿಗೆ ಸರ್ಕಾರದಿಂದ ಸಹಾಯಧನ ನೀಡಿದರೆ ಅನುಕೂಲವಾಗುತ್ತದೆ ಎಂದು ಹೇಳಿದರು. ಎಸ್‌ಪಿಟಿ.ಶ್ರೀಧರ್ ಮಾತನಾಡಿದರು. ಸಂಸದ ಕರಡಿ ಸಂಗಣ್ಣ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಸಿಇಒಬಿ.ಫೌಜಿಯಾ ತರನ್ನುಮ್, ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಎಚ್.ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.