ADVERTISEMENT

ಜಿಲ್ಲೆಯ ಅಭಿವೃದ್ಧಿಗೆ ₹380.60 ಕೋಟಿ: ಸಚಿವ ಆನಂದ್‌ ಸಿಂಗ್

75ನೇ ಕಲ್ಯಾಣ ಕರ್ನಾಟಕ ಉತ್ಸವ; ಸಚಿವ ಆನಂದ್ ಸಿಂಗ್‌ ರಾಷ್ಟ್ರ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 12:57 IST
Last Updated 17 ಸೆಪ್ಟೆಂಬರ್ 2022, 12:57 IST
ಕೊಪ್ಪಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್‌ ಪೊಲೀಸ್‌ ಗೌರವ ವಂದನೆ ಸ್ವೀಕರಿಸಿದರು
ಕೊಪ್ಪಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್‌ ಪೊಲೀಸ್‌ ಗೌರವ ವಂದನೆ ಸ್ವೀಕರಿಸಿದರು   

ಕೊಪ್ಪಳ: ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 2022-23ನೇ ಸಾಲಿನಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಒಟ್ಟು ₹380.60 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್ ಹೇಳಿದರು.

75ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ ‘ಜಿಲ್ಲೆಗೆ ಮೈಕ್ರೊ ವಲಯದಲ್ಲಿ ₹100.48 ಕೋಟಿ ಹಾಗೂ ಮ್ಯಾಕ್ರೊ ವಲಯದಲ್ಲಿ ₹43.06 ಕೋಟಿ ನಿಗದಿಪಡಿಸಲಾಗಿದೆ. ಈ ಅನುದಾನಕ್ಕೆ ಈಗಾಗಲೇ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಮಂಡಳಿ ಅನುಮೋದನೆ ಕೂಡ ಕೊಟ್ಟಿದೆ’ ಎಂದರು.

‘ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ₹40 ಕೋಟಿ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ₹40 ಕೋಟಿ, ಕುಕನೂರು ಮತ್ತು ಯಲಬುರ್ಗಾ ಬೈಪಾಸ್ ರಸ್ತೆ ನಿರ್ಮಾಣಕ್ಕೆ ₹48.52 ಕೋಟಿ,ವಿವಿಧಇಲಾಖೆಗಳಅಭಿವೃದ್ಧಿ ಕಾಮಗಾರಿಗಳಿಗೆ ₹108.53 ಕೋಟಿ ಸೇರಿದಂತೆ ಒಟ್ಟು ₹380.60 ಕೋಟಿ ಅನುದಾನ ಗದಿಪಡಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ನರೇಗಾದಡಿ ಜಿಲ್ಲೆಯಲ್ಲಿ 2,96,378 ಕುಟುಂಬಗಳು ಹೆಸರು ನೋಂದಾಯಿಸಿದ್ದು, 2022-23ನೇ ಸಾಲಿಗೆ ₹360.50 ಕೋಟಿ ಕ್ರಿಯಾ ಯೋಜನೆ ರೂಪಿಸಲಾಗಿದೆ. ಅಂಜನಾದ್ರಿ ಬೆಟ್ಟ ಪ್ರದೇಶವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಈಗಾಗಲೇ ₹120 ಕೋಟಿಅನುದಾನಮೀಸಲಿಡಲಾಗಿದೆ’ಎಂದರು.

‘ಕುಷ್ಟಗಿ ತಾಲ್ಲೂಕಿನ ಬಿಜಕಲ್, ಬೆನಕನಾಳ, ಹಿರೇಬನ್ನಿಗೋಳ, ಕೊಪ್ಪಳ ತಾಲ್ಲೂಕಿನ ಗುಡದಳ್ಳಿ, ನಾಗೇಶನಹಳ್ಳಿ ಮತ್ತು ಗಂಗಾವತಿ ತಾಲ್ಲೂಕಿನ ಚಿಕ್ಕಬೆಣಕಲ್ ಗ್ರಾಮಗಳಿಗೆ ಒಟ್ಟು 6 ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. 2022-23ನೇ ಸಾಲಿನ ಮಂಡಳಿಯ ಯೋಜನೆಯಲ್ಲಿ 137 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಜಿಲ್ಲೆಯಲ್ಲಿ 2 ಪೌಷ್ಟಿಕ ಆಹಾರ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಪ್ರತಿ ಘಟಕಕ್ಕೆ ₹1 ಕೋಟಿ ಒದಗಿಸಲು ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ’ ಎಂದು ಹೇಳಿದರು.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕರಡಿ ಸಂಗಣ್ಣ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಧ್ವಜಾರೋಹಣ

ಕೊಪ್ಪಳ: ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ‘ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಅಧಿಕಾರಿಗಳು ಒಗ್ಗೂಡಿ ಶ್ರಮಿಸಬೇಕು’ ಎಂದು ಹೇಳಿದರು.

‘ಕೊಪ್ಪಳ ಜಿಲ್ಲೆ ರಚನೆಯಾಗಿ ಪ್ರಸ್ತುತ 25 ವರ್ಷಗಳು ಪೂರ್ಣಗೊಂಡಿವೆ. ಈ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಆಗಬೇಕಾದ ಕೆಲಸಗಳೂ ಸಾಕಷ್ಟಿವೆ. ಇದಕ್ಕಾಗಿ ಎಲ್ಲಾ ಅಧಿಕಾರಿಗಳು ಒಂದಾಗಿ ಕೆಲಸ ಮಾಡಬೇಕು. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾನಿಯಾದ ಬಗ್ಗೆ ಪರಿಹಾರ ನೀಡುವ ಕ್ರಮವನ್ನು ಕಂದಾಯ ಇಲಾಖೆಯಿಂದ ಉತ್ತಮವಾಗಿ ನಿರ್ವಹಣೆಯಾಗುತ್ತಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಆಹಾರ ಉಪನಿರ್ದೇಶಕ ಮಲ್ಲಿಕಾರ್ಜುನ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ರೆಡ್ಡೇರ್, ಪಶುಇಲಾಖೆ ಉಪನಿರ್ದೇಶಕ ಎಚ್.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.