ADVERTISEMENT

Covid-19: ಆಮ್ಲಜನಕ, ವೆಂಟಿಲೇಟರ್ ಕೊರತೆ ಇಲ್ಲ

ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ಇಡಲು ನೋಡಲ್ ಅಧಿಕಾರಿಗಳ ನೇಮಕ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಮೇ 2021, 4:42 IST
Last Updated 6 ಮೇ 2021, 4:42 IST
   

ಕೊಪ್ಪಳ: ‘ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕವಿರುವುದರಿಂದ ಯಾವುದೇ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಇಲ್ಲ’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸ್ಪಷ್ಟನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಉತ್ಪಾದನಾ ಘಟಕದಿಂದ 2 ರಿಂದ 3 ಗಂಟೆಗಳ ಕನಿಷ್ಠ ಅವಧಿಯಲ್ಲಿ ಆಮ್ಲಜನಕ ಸೌಲಭ್ಯ ಹೊಂದಿರುವ ಯಾವುದೇ ಆಸ್ಪತ್ರೆಗೆ ಪೂರೈಸುವ ವ್ಯವಸ್ಥೆ ಕಲ್ಪಿಸಲಾಗಿದೆ.ಇಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯದ ಇತರೆ ಭಾಗಗಳಿಗೂ ಪೂರೈಕೆ ಮಾಡಲಾಗುತ್ತಿದೆಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ 29 ವೆಂಟಿಲೇಟರ್‌ಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ ಅಗತ್ಯಕ್ಕೆ ತಕ್ಕಂತೆ 16 ವೆಂಟಿಲೇಟರ್‌ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇನ್ನೂ 13 ವೆಂಟಿಲೇಟರ್‌ಗಳು ಲಭ್ಯವಿದ್ದು, ಅವಶ್ಯಕತೆ ಇದ್ದಲ್ಲಿ ಬಳಸಿಕೊಳ್ಳಲಾಗುವುದು. ವೆಂಟಿಲೇಟರ್ ನಿರ್ವಹಣೆಗೆ ತಜ್ಞರನ್ನು ನಿಯೋಜಿಸಲಾಗಿದೆ.ರೋಗಿಯನ್ನು ಆಗಿಂದಾಗ್ಗೆ ಪರೀಕ್ಷಿಸಿ ಅವಶ್ಯಕತೆಗೆನುಸಾರ ಆಮ್ಲಜನಕ ಒದಗಿಸಲಾಗುತ್ತಿದೆ ಎಂದರು.

ADVERTISEMENT

50 ವೆಂಟಿಲೇಟರ್‌ಗಳ ಪೈಕಿ 31 ವೆಂಟಿಲೇಟರ್‌ನಲ್ಲಿ ರೋಗಿಗಳು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕ ವಿಧಿಸುವಂತಿಲ್ಲ. ಒಂದು ವೇಳೆ ಹೆಚ್ಚಿನ ಶುಲ್ಕ ವಸೂಲಿ ಕಂಡುಬಂದಲ್ಲಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದರು.

ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ಇಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನೋಡಲ್ ಅಧಿಕಾರಿಗಳು ಆಗಿಂದಾಗ್ಗೆ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಪರಿಶೀಲನೆ ನಡೆಸುವರು. ಅದರಂತೆ ವಲಸೆ ಕಾರ್ಮಿಕರು ಹಾಗೂ ಬೇರೆ ರಾಜ್ಯ, ಜಿಲ್ಲೆಗಳಿಂದ ಗ್ರಾಮಗಳಿಗೆ ಮರಳುತ್ತಿರುವವರ ಮೇಲೆ ನಿಗಾ ವಹಿಸಲು ಕೂಡ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಇವರು ಗ್ರಾಮಕ್ಕೆ ಮರಳಿದವರನ್ನು ಗುರುತಿಸಿ ಅವರಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕೋವಿಡ್ ಲಸಿಕೆಗೆ ಸರ್ಕಾರ ನಿಗದಿಪಡಿಸಿದ ವಯೋಮಾನದವರಲ್ಲಿ 60 ವರ್ಷ ಮೇಲ್ಪಟ್ಟ 79,708 ಜನರಿಗೆ ಹಾಗೂ 45 ರಿಂದ 60 ವರ್ಷದೊಳಗಿನ 78,727 ಜನರಿಗೆ ಮೊದಲನೇ ಡೋಸ್ ಲಸಿಕೆ ನೀಡಲಾಗಿದೆ. ಈಗಲೂ ಕೂಡ ಲಸಿಕೆ ವಿತರಣೆ ಕಾರ್ಯ ಪ್ರಗತಿಯಲ್ಲಿದ್ದು, ಲಸಿಕೆ ಪಡೆಯದೇ ಇರುವವರು ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಪಡೆಯಬಹುದು ಎಂದರು.

ಕಿಮ್ಸ್ ನಿರ್ದೇಶಕ ಡಾ.ವೈಜನಾಥ ಇಟಗಿ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ಅಗತ್ಯವಾಗಿರುವ ಸಿಟಿ-ಸ್ಕ್ಯಾನ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದ್ದು, ನಾಳೆಯಿಂದ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು.ಟಿ, ಮೆಡಿಕಲ್ ಸೂಪಿರಿಡೆಂಟ್ ವೇಣುಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.