ಕೊಪ್ಪಳ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅನಧಿಕೃತ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮೇಲೆ ತೀವ್ರ ನಿಗಾವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಕಾಯ್ದೆ ಮತ್ತು ಸಂರಕ್ಷಣೆ ಅಧಿನಿಯಮ-2020ರ ಅನ್ವಯ ಗೋ ಹತ್ಯೆ ನಿಷೇಧಿಸಲಾಗಿದೆ. ಪ್ರಾಣಿಗಳ ಸಾಗಾಣಿಕೆ ನಿಯಮ ಬಾಹಿರವಾಗಿದ್ದು, ಎಲ್ಲಾ ವಯಸ್ಸಿನ ಆಕಳು, ಆಕಳು ಕರು, ಹೋರಿ, ಎತ್ತು ಅಲ್ಲದೆ 13 ವರ್ಷದೊಳಗಿನ ಎಮ್ಮೆ, ಕೋಣ ಹಾಗೂ ಉಚ್ಚ ನ್ಯಾಯಾಲಯದ ಆದೇಶದನ್ವಯ ಒಂಟೆಗಳನ್ನು ಹತ್ಯೆ ಮಾಡುವಂತಿಲ್ಲ’ ಎಂದು ಸೂಚಿಸಿದರು.
‘ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಅತ್ಯವಶ್ಯಕತೆ ಇದ್ದು, ಈ ಕುರಿತು ಪಶು ಇಲಾಖೆ, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಂಡಗಳನ್ನು ರಚಿಸಿ, ಸೂಕ್ತ ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾದ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ತೆರೆಯಬೇಕು. ಅಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದರು.
‘ಜೂನ್ 6ರ ಒಳಗೆ ಜಿಲ್ಲೆಯ ಎಲ್ಲಾ ಪೋಲಿಸ್ ಠಾಣೆಗಳಲ್ಲಿ ಜನಪ್ರತಿನಿಧಿಗಳು ಹಾಗೂ ಮುಖಂಡರ ಸಮ್ಮುಖದಲ್ಲಿ ಶಾಂತಿ ಸಭೆ ಕರೆಯಬೇಕು’ ಎಂದು ಹೇಳಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಡಿವೈಎಸ್‌ಪಿ ಮುತ್ತಣ್ಣ ಸರವಗೋಳ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.