ADVERTISEMENT

ಕೊಪ್ಪಳ | ಚೆಕ್‌ಪೋಸ್ಟ್ ನಿರ್ಮಾಣಕ್ಕೆ ಕ್ರಮ ವಹಿಸಲು ಸೂಚನೆ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2024, 15:12 IST
Last Updated 1 ಏಪ್ರಿಲ್ 2024, 15:12 IST
ನಲಿನ್‌ ಅತುಲ್‌
ನಲಿನ್‌ ಅತುಲ್‌   

ಕೊಪ್ಪಳ: ‘ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜಿಲ್ಲಾ ಗಡಿಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಇನ್ನಷ್ಟು ಕಡೆ ಅಗತ್ಯವಿರುವೆಡೆ ಚೆಕ್‌ಪೋಸ್ಟ್‌ ನಿರ್ಮಿಸಿ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಲಿನ್ ಅತುಲ್‌ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣಾ ಸಿದ್ದತಾ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿಗೆ ಸೂಕ್ತ ನೆರಳಿನ ವ್ಯವಸ್ಥೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಥಾಪಿಸಿದ ಚೆಕ್‌ ಪೋಸ್ಟ್‌ಗಳಿಗೆ ಶಾಮಿಯಾನ ಹಾಕಿಸಿ, ತೆಂಗಿನ ಗರಿ ಅಥವಾ ಭತ್ತದ ಹುಲ್ಲುಗಳಿಂದ ನೆರಳು ಕಲ್ಪಿಸಿ’ ಎಂದು ನಿರ್ದೇಶನ ನೀಡಿದರು.

‘ಸಿ-ವಿಜಿಲ್ ತಂತ್ರಾಂಶದಲ್ಲಿ ದಾಖಲಾಗುವ ಯಾವುದೇ ದೂರನ್ನು ಗರಿಷ್ಠ 100 ನಿಮಿಷಗಳಲ್ಲಿ ಪರಿಹರಿಸಬೇಕು. ಅದಕ್ಕೂ ಹೆಚ್ಚಿನ ಸಮಯ ತೆಗೆದುಕೊಳ್ಳಬೇಡಿ. ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮಾಧ್ಯಮ ಮೇಲ್ವಿಚಾರಣಾ ಸಮಿತಿಯಿಂದ ಪ್ರತಿನಿತ್ಯದ ಪೇಯ್ಡ್ ನ್ಯೂಸ್, ಜಾಹೀರಾತುಗಳ ಮೇಲೆ ನಿಗಾ ವಹಿಸಿ ವರದಿ ಸಲ್ಲಿಸಬೇಕು. ದಿನಪತ್ರಿಕೆಗಳು, ಸುದ್ದಿ ವಾಹಿನಿಗಳನ್ನು ಗಮನಿಸಬೇಕು. ಸೆಕ್ಟರ್ ಅಧಿಕಾರಿಗಳಿಗೆ ಸೂಕ್ತ ವಾಹನದ ವ್ಯವಸ್ಥೆ ಕಲ್ಪಿಸಬೇಕು’ ಎಂದು ಸೂಚಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತ ಕ್ಯಾಪ್ಟನ್‌ ಮಹೇಶ್ ಮಾಲಗಿತ್ತಿ ಹಾಗೂ ವಿವಿಧ ಹಂತದ ಚುನಾವಣಾ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.