ADVERTISEMENT

ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಹಾಲಪ್ಪ ಆಚಾರ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 15:58 IST
Last Updated 7 ಆಗಸ್ಟ್ 2021, 15:58 IST
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಹಾಲಪ್ಪ ಆಚಾರ ಮಾತನಾಡಿದರು
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಹಾಲಪ್ಪ ಆಚಾರ ಮಾತನಾಡಿದರು   

ಕೊಪ್ಪಳ: ‘ಚುನಾಯಿತ ಪ್ರತಿನಿಧಿ ಹಾಗೂ ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ ಇರುವುದು ಜನರ ಸೇವೆಗಾಗಿ. ಆದ್ದರಿಂದ ಎಲ್ಲರೂ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ, ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕೋವಿಡ್-19 ಮೂರನೇ ಅಲೆ ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಕಾರ್ಯ ಇದುವರೆಗೂ ಉತ್ತಮವಾಗಿ ನಡೆದಿದ್ದು, ಇನ್ನು ಮುಂದೆಯೂ ಇದೇ ಜವಾಬ್ದಾರಿಯಿಂದ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸಬೇಕು. ಕೋವಿಡ್ ಮೂರನೇ ಅಲೆ ಜಿಲ್ಲೆಯಲ್ಲಿ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ADVERTISEMENT

ಮಕ್ಕಳ ಚಿಕಿತ್ಸೆಗೆ ಅಗತ್ಯವಾದ ವೆಂಟಿಲೇಟರ್, ಆಮ್ಲಜನಕಯುಕ್ತ ಹಾಸಿಗೆ, ಅಗತ್ಯ ಪ್ರಮಾಣದ ವೈದ್ಯರು, ತಜ್ಞರು, ವೈದ್ಯಕೀಯ ಸಿಬ್ಬಂದಿ ನೇಮಕ,ಆಮ್ಲಜನಕಪ್ಲ್ಯಾಂಟ್‌ಗಳ ಸ್ಥಾಪನೆ ಮುಂತಾದ ಸೌಲಭ್ಯ ಸಿದ್ಧವಾಗಿಟ್ಟುಕೊಳ್ಳಿ. ಕಳೆದ ಕೋವಿಡ್ ಅಲೆಗಳಿಗಿಂತ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ತೊಂದರೆ ಇರುವುದರಿಂದ ಮಕ್ಕಳ ತಜ್ಞರು ಎಲ್ಲ ಆಸ್ಪತ್ರೆಗಳಲ್ಲಿ ಲಭ್ಯವಿರಬೇಕುಎಂದರು.

'ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಯಾವುದೇ ಸಮಸ್ಯೆ ಕುರಿತು ಕರೆ ಮಾಡಿದಾಗ, ಸಂಪರ್ಕಿಸಿದಾಗ ಅಧಿಕಾರಿಗಳು ಸಂಪರ್ಕಕ್ಕೆ ಲಭ್ಯವಿರಬೇಕು. ಆಡಳಿತದಲ್ಲಿ ಪಾರದರ್ಶಕತೆ ಇರಬೇಕು. ಶ್ರದ್ಧೆ, ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯಿಂದ ಕರ್ತವ್ಯ ನಿರ್ವಹಿಸಲು ಇಷ್ಟವಿಲ್ಲದ ಅಧಿಕಾರಿಗಳು ಬೇರೆಡೆ ಹೋಗಬಹುದು' ಎಂದು ಎಚ್ಚರಿಕೆ ನೀಡಿದರು.

ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಮಾತನಾಡಿ, ಜಲಜೀವನ ಮಿಷನ್ ಯೋಜನೆಯಡಿ ಕುಷ್ಟಗಿ ತಾಲ್ಲೂಕಿನ 155 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲುಎಲ್‌ಆಂಡ್‌ಟಿಸಂಸ್ಥೆಗೆ ಕಾಮಗಾರಿ ವಹಿಸಲಾಗಿದ್ದು, ಸಂಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸಚಿವರು ಕ್ರಮ ಕೈಗೊಳ್ಳಬೇಕು. ಮಳೆಯ ಕೊರತೆಯಿಂದ ಬರಗಾಲ ಉಂಟಾಗುವ ಪರಿಸ್ಥಿತಿ ಇದ್ದು, ಈ ಬಗ್ಗೆ ಸಚಿವರು ಸರ್ಕಾರದ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಸಚಿವರು, ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸರಿಯಾಗಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡುವಂತೆ ಜಿ.ಪಂ ಸಿಇಒಗೆ ಹಾಗೂ ಮಳೆಯ ಕೊರತೆಯಿಂದ ಉಂಟಾದ ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾತನಾಡಿದರು. ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಜಿಲ್ಲಾ ಪಂಚಾಯತಿಸಿಇಒ ಫೌಜಿಯಾ ತರನ್ನುಮ್,ಎಸ್ಪಿ ಟಿ.ಶ್ರೀಧರ್,ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.