ADVERTISEMENT

ಕೊಪ್ಪಳ | ಒಬಿಸಿ ಮಾನ್ಯತೆ ನೀಡಲು ಆಗ್ರಹಿಸಿ 1ರಂದು ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 11:53 IST
Last Updated 28 ಜುಲೈ 2022, 11:53 IST

ಕೊಪ್ಪಳ: ‘ಕೇಂದ್ರ ಸರ್ಕಾರ ವೀರಶೈವ ಲಿಂಗಾಯತರಿಗೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಲು ಅ. 1ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಕಾರ್ಯದರ್ಶಿ ಕೆ.ಬಿ.ಶ್ರೀನಿವಾಸರಡ್ಡಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಮ್ಮ ಸಮುದಾಯ ಸದ್ಯಕ್ಕೆ ರಾಜ್ಯ ಹಿಂದುಳಿದ ಪಟ್ಟಿಯಲ್ಲಿದ್ದು, ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಕೇಂದ್ರಕ್ಕೆ ಕಳುಹಿಸಿದರೂ ಪ್ರಯೋಜನವಾಗಿಲ್ಲ’ ಎಂದರು.

ಆದ್ದರಿಂದ ಈಗ ಮತ್ತೆ ಶಾಂತಿಯುತವಾಗಿ ಮೆರವಣಿಗೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ಹೋರಾಟದ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ADVERTISEMENT

‘ನಮ್ಮ ಸಮುದಾಯದ ಅನೇಕ ಮಠಗಳು ರಾಜ್ಯದಲ್ಲಿ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿವೆ. ತುಮಕೂರು ಹಾಗೂ ಬೆಳಗಾವಿ, ಸೇರಿ ರಾಜ್ಯದಾದ್ಯಂತ ಸಮುದಾಯದ ಶಿಕ್ಷಣ ಸಂಸ್ಥೆಗಳು ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಸರ್ಕಾರದ ನಮ್ಮ ಬೇಡಿಕೆಗೆ ಆದ್ಯತೆ ನೀಡಬೇಕು’ ಎಂದು ಆಗ್ರಹಿಸಿದರು.

ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಕಳಕನಗೌಡ ಕಲ್ಲೂರು, ವೀರೇಶ ಮುಧೋಳ, ವಿಜಯಕುಮಾರ್ ಪಾಟೀಲ್, ಚನ್ನಪ್ಪ ಮಳಗಿ, ತಾಲ್ಲೂಕು ಘಟಕದ ಅಧ್ಯಕ್ಷ ಗುರುರಾಜ ಹಲಗೇರಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.