
ಯಲಬುರ್ಗಾ: ತಾಲ್ಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟಕ್ಕೆ ಪೂರೈಕೆಯಾಗುವ ಆಹಾರ ಧಾನ್ಯಗಳು ಕಳಪೆಯಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಈರಪ್ಪ ಸಂಗನಾಳ, ಉಪಾಧ್ಯಕ್ಷ ಮುತ್ತಪ್ಪ ದೇಸಾಯಿ, ಸದಸ್ಯ ಮಾರುತಿ ಚಂಡೂರ ಸೇರಿದಂತೆ ಅನೇಕರು ಶಾಲೆಗೆ ಭೇಟಿ ನೀಡಿ ಆಹಾರಧಾನ್ಯಗಳನ್ನು ಪರಿಶೀಲಿಸಿ ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕರನ್ನು ಶಾಲೆಗೆ ಕರೆಯಿಸಿ ಗುಣಮಟ್ಟದ ಧಾನ್ಯಗಳನ್ನು ಪೂರೈಸುವಂತೆ ಒತ್ತಾಯಿಸಿದರು.
ಪೂರೈಕೆಯಾದ ತೊಗರಿ ಬೇಳೆಗಳಲ್ಲಿ ಹುಳುಗಳಿವೆ. ಅಲ್ಲದೇ ಜಿಡ್ಡುಗಟ್ಟಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೆ ಬೇಜವಾಬ್ದಾರಿ ಮಾತುಗಳನ್ನಾಡಿದ್ದಾರೆ ಎಂದು ಗ್ರಾಪಂ ಸದಸ್ಯ ಯಮನೂರಪ್ಪ ಕುರಿ ಅಧಿಕಾರಿ ವಿರುದ್ಧ ಹರಿಹಾಯ್ದಿದ್ದಾರೆ.
ತಾಲ್ಲೂಕಿನಾದ್ಯಂತ ಈ ರೀತಿಯ ಕಳಪೆ ಆಹಾರಧಾನ್ಯಗಳು ಪೂರೈಕೆಯಾಗುತ್ತಿವೆ. ಶಿಕ್ಷಣ ಇಲಾಖೆಯ ಗಮನಕ್ಕೆ ಇದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೇ ಕಳಪೆ ಪೂರೈಸುವವರ ಪರವಾಗಿ ಮಾತನಾಡುತ್ತಿದ್ದಾರೆ. ಅಧಿಕಾರಿಗಳ ಮತ್ತು ಕಳಪೆ ದಾನ್ಯಗಳ ಪೂರೈಕೆದಾರರಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಜಿಲ್ಲಾಮಟ್ಟದ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಗ್ರಾಮದ ಮುಖಂಡರಾದ ಬಾಳಪ್ಪ ಕವಳಕೇರಿ, ಶರಣಪ್ಪ ಬಿಂದಗಿ ಸೇರಿದಂತೆ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.