ಪ್ರತಿಭಟನೆ: ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದ ರೂವಾರಿಯಾಗಿದ್ದು ಅವರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಹೈಕೋರ್ಟ್ ಸಿದ್ದರಾಮಯ್ಯ ಅವರ ಅರ್ಜಿ ವಜಾ ಮಾಡಿದ್ದರಿಂದ ಸತ್ಯಕ್ಕೆ ನ್ಯಾಯ ಸಿಕ್ಕಂತಾಗಿದೆ. ಅವರು ತನಿಖೆ ಎದುರಿಸಿ ಜೈಲಿಗೆ ಹೋಗಲೇಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದರು.
ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಲೇಬೇಕು, ಇದಕ್ಕಾಗಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ 'ನನ್ನ ರಾಜಕೀಯ ಬದುಕಿನಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಅವರ ನಿಜ ಬಣ್ಣ ಈಗ ಬಯಲಾಗಿದೆ. ಅಂಗೈ ಹುಣ್ಣಿಗೆ ಸಾಕ್ಷಿ ಬೇಕಾ' ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಮುಡಾ ಹಗರಣದಲ್ಲಿ ಫಲಾನುಭವಿ ಆಗಿರುವ ನೀವು ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ ಎಂದರು.
ರಾಜ್ಯ ಕಾರ್ಯಕಾರಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಮಾತನಾಡಿ ಸಿದ್ದರಾಮಯ್ಯ ಈಗ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದ್ದು, ಕೂಡಲೇ ರಾಜೀನಾಮೆ ನೀಡಬೇಕು. ಕಪ್ಪು ಚುಕ್ಕೆ ಇಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ ಮಾಡಿದ್ದು ಎಲ್ಲವೂ ಕಪ್ಪು ಎನ್ನುವುದು ಸಾಬೀತಾಗಿದೆ ಎಂದು ಹೇಳಿದರು.
ಪಕ್ಷದ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಮಾತನಾಡಿ 'ಮುಡಾ ವಿಷಯ ಮುಂದಿಟ್ಟುಕೊಂಡು ಬಿಜೆಪಿ ನಿರಂತರವಾಗಿ ಹೋರಾಟ ಮಾಡಿದ್ದು ನಮ್ಮ ಹೋರಾಟಕ್ಕೆ ಸಿಕ್ಕ ಗೆಲುವು ಇದು. ರಾಜೀನಾಮೆ ನೀಡುವ ತನಕ ಹೋರಾಟ ನಿರಂತರ' ಎಂದು ತಿಳಿಸಿದರು.
ಪಕ್ಷದ ಪ್ರಮುಖರಾದ
ಗಣೇಶ ಹೊರಟ್ನಾಳ, ಸುನಿಲ್ ಹೆಸರೂರ, ನೀಲಕಂಠ, ರಮೇಶ ಕವಲೂರು, ಪ್ರದೀಪ ಹಿಟ್ನಾಳ, ಶಿವಕುಮಾರ, ಎಸ್.ಎಸ್. ಭೂಸನೂರಮಠ, ರಾಘವೇಂದ್ರ ಪಾನಘಂಟಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.