ADVERTISEMENT

ರಸ್ತೆ ಮೇಲ್ದರ್ಜೆಗೆ ಏರಿಸಲು ಸಲಹೆ ಅಗತ್ಯ: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 18:00 IST
Last Updated 15 ಜುಲೈ 2020, 18:00 IST
ಕುಷ್ಟಗಿ ಬಳಿ ಬುಧವಾರ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಧಿಕಾರಿಗಳ ಸಭೆ ನಡೆಸಿದರು. ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ, ಬಸವರಾಜ ಧಡೇಸಗೂರು ಇದ್ದರು
ಕುಷ್ಟಗಿ ಬಳಿ ಬುಧವಾರ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಧಿಕಾರಿಗಳ ಸಭೆ ನಡೆಸಿದರು. ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ, ಬಸವರಾಜ ಧಡೇಸಗೂರು ಇದ್ದರು   

ಕುಷ್ಟಗಿ: ರಾಜ್ಯದ ಎಲ್ಲ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸುವ ಅಗತ್ಯವಿದ್ದು, ಈ ಬಗ್ಗೆ ಆಯಾ ಕ್ಷೇತ್ರಗಳ ಶಾಸಕರಿಂದ ಪ್ರಸ್ತಾವಗಳನ್ನು ಪಡೆಯುವ ಮೂಲಕ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಬುಧವಾರ ಇಲ್ಲಿಗೆ ಸಮೀಪದ ಹಿರೇವಂಕಲಕುಂಟಾ ಪ್ರವಾಸಿ ಮಂದಿರದಲ್ಲಿ ಇಲಾಖೆಯ ರಾಯಚೂರು ಮತ್ತು ಕೊಪ್ಪಳ ವಿಭಾಗಗಳ ಎಂಜಿನಿಯರ್‌ಗಳ ಸಭೆಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕ್ಷೇತ್ರಗಳಲ್ಲಿನ ರಸ್ತೆಗಳ ಸ್ಥಿತಿಗತಿ ಬಗ್ಗೆ ಶಾಸಕರಿಗೆ ಅರಿವಿರುತ್ತದೆ. ಜೊತೆಗೆ ಯಾವ ಯಾವ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕೆಂಬ ಬಗ್ಗೆ ಅವರಿಂದ ಮಾಹಿತಿ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶದ ರಸ್ತೆಗಳು ಸೇರಿದಂತೆ ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸುವ ಅಗತ್ಯವಿದೆ. ಇದರಿಂದ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ರಸ್ತೆಗಳ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಗ್ರಾಮೀಣ ರಸ್ತೆಗಳನ್ನು ಎಂಡಿಆರ್‌ ರಸ್ತೆಗಳನ್ನಾಗಿಸಬೇಕು ಅದೇ ರೀತಿ ಎಂಡಿಆರ್‌ ರಸ್ತೆಗಳನ್ನು ರಾಜ್ಯ ಹೆದ್ದಾರಿಗಳನ್ನಾಗಿಸಬೇಕು. ಅಂದರೆ ಮಾತ್ರ ರಸ್ತೆಗಳ ಅಭಿವೃದ್ಧಿ, ನಿರ್ವಹಣೆಗೆ ಹೆಚ್ಚಿನ ಅನುದಾನ ಲಭ್ಯವಾಗುತ್ತದೆ. ಈ ವಿಷಯದಲ್ಲಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಸಲಹೆ, ಸೂಚನೆ ಪಡೆಯಬೇಕು ಎಂದು ಎಂಜಿನಿಯರ್ ಗಳಿಗೆ ಸೂಚಿಸಿದರು.

ADVERTISEMENT

ಕೋವಿಡ್‌ ಸೋಂಕು ವ್ಯಾಪಕವಾಗುತ್ತಿರುವ ಕಾರಣಕ್ಕೆ ಇಲಾಖೆಯ ಕೆಲಸ ಕಾಮಗಾರಿಗಳು ವಿಳಂಬವಾಗುತ್ತಿರುವುದನ್ನು ಪ್ರಸ್ತಾಪಿಸಿದ ಸಚಿವರು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಕಟ್ಟಡ, ರಸ್ತೆ ಕೆಲಸಗಳಲ್ಲಿ ಕಾರ್ಮಿಕರು, ಅಧಿಕಾರಿಗಳು ಮಾಸ್ಕ್‌ಗಳನ್ನು ಧರಿಸಿಕೊಂಡು ಕೆಲಸ ನಿರ್ವಹಿಸಬೇಕು. ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಜೊತೆಗೆ ಕಾಮಗಾರಿಗಳ ಗುಣಮಟ್ಟದ ವಿಷಯದಲ್ಲಿ ರಾಜಿ ಮಾಡಿಕೊಳ್ಳದೆ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸಬೇಕು. ಕಳೆದ ಮೂರು ತಿಂಗಳ ಅವಧಿಯಲ್ಲಿ ಅನುಷ್ಠಾನಗೊಳ್ಳಬೇಕಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ, ಬಸವರಾಜ ಧಡೇಸಗೂರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.