ಕನಕಗಿರಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರಗಳ ಪ್ರಕರಣಗಳನ್ನು ಸೂಕ್ತ ತನಿಖೆ ನಡೆಸಿ ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನೆಯ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ ಮಾತನಾಡಿ, ‘ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಕಲಬುರಗಿ ಮೂಲದ 10 ವರ್ಷದ ಬಾಲಕಿಯ ಮೇಲೆ ಮೈಸೂರಿನಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಎಂಜಿನಿಯರ್ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ,ವಿಜಯಪುರ ಜಿಲ್ಲೆಯಲ್ಲಿ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅತ್ಯಾಚಾರ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.
‘ರಾಜ್ಯದಲ್ಲಿ ಇನ್ನೂ ಮುಂದೆ ಇಂಥ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ರಾಜ್ಯದ ಎಲ್ಲಾ ಕಡೆಗೂ ಪ್ರತಿಭಟನೆ ಮಾಡಲಾಗುವುದು. ಇಲ್ಲದಿದ್ದರೆ ಕರ್ನಾಟಕ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಭಾರತೀಯ ವಿದ್ಯಾರ್ಥಿ ಫೆಡರೇಶನ್ ತಾಲ್ಲೂಕು ಅಧ್ಯಕ್ಷ ಹನುಮೇಶ ಮ್ಯಾಗಡೆ, ಉಪಾಧ್ಯಕ್ಷ ಮಾರುತಿ ಹಾಗೂ ವಿದ್ಯಾರ್ಥಿಗಳು ಇದ್ದರು. ಮುಖ್ಯಮಂತ್ರಿ ಅವರಿಗೆ ಬರೆದ ಪತ್ರವನ್ನು ತಹಶೀಲ್ದಾರ್ ಕಚೇರಿ ಮೂಲಕ ಕಳಿಸಲಾಯಿತು.
ಶಿರಸ್ತೇದಾರ ಅನಿತಾ ಇಂಡಿ ಅವರು ಮನವಿ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.