ಕೊಪ್ಪಳ: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಲೇಬೇಕು ಎಂದು ಆಗ್ರಹಿಸಿ ಮಾದಿಗ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಇಲ್ಲಿನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಸಮುದಾಯದ ಮುಖಂಡರು ಹಾಗೂ ಪೊಲೀಸರ ನಡುವೆ ವಾಗ್ವಾಗ ಹಾಗೂ ಜಟಾಪಟಿ ನಡೆಯಿತು. ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೋರಾಟಗಾರರು ಘೋಷಣೆಗಳನ್ನು ಕೂಗಿದರು.
ಜಿಲ್ಲಾಡಳಿತ ಪ್ರವೇಶಿಸುವ ಹೊರಭಾಗದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು ಮಾತನಾಡಿ ಒಳ ಮೀಸಲಾತಿ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಮೂರೂವರೆ ದಶಕಗಳಿಂದ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಲೇ ಬಂದಿದ್ದು, ಈಗಲಾದರೂ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ವಿಳಂಬ ಧೋರಣೆ ಕೈಬಿಡಬೇಕು. ಆ. 11ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ತರುವ ತೀರ್ಮಾನ ಪ್ರಕಟಿಸಬೇಕು. ಇಲ್ಲವಾದರೆ ರಾಜ್ಯದಾದ್ಯಂತ 16ರಿಂದ ಅಸಹಕಾರ ಹೋರಾಟ ಆರಂಭಿಸಲಾಗುವುದು. ಯಾವುದೇ ಪಕ್ಷವಾದರೂ ಅಧಿಕಾರಕ್ಕೆ ಬರುವಾಗ ಒಂದು ರೀತಿ, ಬಂದ ಬಳಿಕ ಇನ್ನೊಂದು ರೀತಿಯ ನಿಲುವು ಪ್ರಕಟಿಸುತ್ತಿವೆ. ಯಾವದೇ ಸರ್ಕಾರಗಳು ಒಳಮೀಸಲಾತಿ ಅಪೇಕ್ಷಿತ ಸಮುದಾಯದ ಜನರ ತಾಳ್ಮೆ ಪರೀಕ್ಷೆ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದ ಕಾರಣ ಪೊಲೀಸರು ಕೆಲವು ಹೋರಾಟಗಾರರನ್ನು ವಶಕ್ಕೆ ಪಡೆದು ಬಸ್ ನಲ್ಲಿ ಕರೆದುಕೊಂಡು ಹೋದರು. ಅದರೂ ಪಟ್ಟು ಸಡಿಲಿಸದೆ ಇನ್ನುಳಿದ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿ, ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.