
ಕೊಪ್ಪಳ: ಕಡ್ಡಾಯ ಮತ್ತು ಉಚಿತ ಶಿಕ್ಷಣ ಹಕ್ಕು ಕಾಯ್ದೆ-2009 ಅಡಿಯಲ್ಲಿ ಮಕ್ಕಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಹೇಳಿದರು.
ಮಂಗಳವಾರ ಜಿಲ್ಲಾಡಳಿತ ಭವನದ ಕೃಷಿ ಇಲಾಖೆಯ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳೊಂದಿಗೆ ಕಡ್ಡಾಯ ಮತ್ತು ಉಚಿತ ಶಿಕ್ಷಣ ಹಕ್ಕು ಕಾಯ್ದೆ-2009ರ ಮೇಲ್ವಿಚಾರಣೆ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ಮಕ್ಕಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗದಂತೆ ಕ್ರಮವಹಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಕರೆತನ್ನಿ, ಅಗತ್ಯವಿದ್ದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಮಾಡುವ ಶಿಕ್ಷಣ ಕಾರ್ಯಪಡೆಯ ಸಹಾಯ ಪಡೆದುಕೊಳ್ಳಬೇಕು’ ಎಂದು ಹೇಳಿದರು.
ದತ್ತು ಮಾಸಾರಣೆ ಮತ್ತು ಮಕ್ಕಳ ಮಾಸ ಅಂಗವಾಗಿ ದತ್ತು ಪ್ರತಿಜ್ಞಾ ವಿಧಿ ಇದೇ ಸಂದರ್ಭದಲ್ಲಿ ಸ್ವೀಕರಿಸಲಾಯಿತು. ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮೂಹ ಸಂಪನ್ಮೂಲ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಘಟಕದ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.