ADVERTISEMENT

‘ಹೊಸ ಫಲಾನುಭವಿಗಳಿಗೆ ಆದ್ಯತೆ ನೀಡಿ': ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್

ಎಸ್‌ಸಿಪಿ., ಟಿಎಸ್‌ಪಿ ಯೋಜನೆಯ ಅನುದಾನ ಸಮರ್ಪಕ ಬಳಕೆಯಾಗಲಿ: ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2021, 13:51 IST
Last Updated 25 ಆಗಸ್ಟ್ 2021, 13:51 IST
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್ ಮಾತನಾಡಿದರು
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್ ಮಾತನಾಡಿದರು   

ಕೊಪ್ಪಳ: ಇದುವರೆಗೂ ಸರ್ಕಾರದ ಸೌಲಭ್ಯ ಪಡೆಯದೇ ಇರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ಸಿಗುವಂತಾಗಬೇಕು ಎಂದು ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್ ಹೇಳಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಕರೆದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ ಅಧಿನಿಯಮ 2013ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ/ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಮಾರ್ಚ್-2021 ಮತ್ತು ಜುಲೈ-2021 ರ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರದ ಸೌಲಭ್ಯ ನಿಜವಾದ ಫಲಾನುಭವಿಗಳಿಗೆ ಸಿಗುವಂತಾಗಬೇಕು. ಮಧ್ಯವರ್ತಿಗಳ ಹಾವಳಿಯಿಂದಾಗಿ ಪಡೆದವರೆ ಪದೇ-ಪದೇ ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಾರೆ. ಹೀಗಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಗಮನಹರಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಹೆಚ್ಚಿನ ಜನರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ಇರುವುದಿಲ್ಲ. ಅಂಥವರಿಗೆ ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸುವ ಕಾರ್ಯವನ್ನು ಆಯಾ ತಾಲ್ಲೂಕಿನ ಅಧಿಕಾರಿಗಳು ಮಾಡಬೇಕು ಎಂದುಸೂಚನೆ ನೀಡಿದರು.

ADVERTISEMENT

ಇಲಾಖೆಗಳ ಸಮನ್ವಯತೆ ಕೊರತೆಯಿಂದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯ ಕಾರ್ಯಕ್ರಮ ನಿರೀಕ್ಷೆಯಷ್ಟು ಪ್ರಗತಿ ಸಾಧಿಸಿಲ್ಲ. ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ಇಲಾಖೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರದಿಂದ ಒದಗಿಸಿದ ಅನುದಾನವನ್ನು ಸಮರ್ಪಕವಾಗಿ ಬಳಸಿ, ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.

ಎಸ್.ಸಿ.ಪಿ- ಟಿ.ಎಸ್.ಪಿ ಯೋಜನೆಯಡಿ ವಿವಿಧ ಏಜೆನ್ಸಿಗಳು ಕೈಗೊಂಡ ಕಾಮಗಾರಿಗಳನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಬೇಕು. ಜಿಲ್ಲೆಯ ಎಲ್ಲಾ ಪಂಚಾಯಿತಿಗಳಿಂದ ಒಂದು ವಾರದೊಳಗೆ ರಾಜ್ಯ ಮತ್ತು ಕೇಂದ್ರ ಮಟ್ಟದಿಂದ ಪಂಚಾಯತ್ ರಾಜ್ ಇಲಾಖೆಗೆ ಬಿಡುಗಡೆಯಾದ ಒಟ್ಟು ಅನುದಾನದ ವರದಿ ಸಿದ್ಧಪಡಿಸಿ, ಬಳಕೆಯಾಗದ ಅನುದಾನದ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ್ ಶಿಂತ್ರೆ ಮಾತನಾಡಿ, ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪ್ರತಿ ಮಾಹೆಯಲ್ಲಿ ಇಲಾಖಾವಾರು ಪ್ರಗತಿ ಸಾಧಿಸಿದ ವರದಿಯನ್ನು ನಿಗದಿತ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಭರ್ತಿಮಾಡಿ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿ.ಪಂ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಎಂ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.