
ಕೊಪ್ಪಳ: ‘ನನಗೆ ಸಚಿವ ಸ್ಥಾನ ಸಿಗುತ್ತದೆಯೊ ಇಲ್ಲವೊ ಗೊತ್ತಿಲ್ಲ. ಆದರೆ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಿದ್ದರಾಮಯ್ಯ ಅವರೇ ಪೂರ್ಣ ಐದು ವರ್ಷ ಮುಖ್ಯಮಂತ್ರಿ ಆಗಿರಬೇಕು. ನನ್ನ ಪ್ರಕಾರ ಅವರೇ ಸಿ.ಎಂ. ಆಗಿರುತ್ತಾರೆ’ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
‘ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವವಿದೆ. ಯಾರನ್ನಾದರೂ ಬದಲಿಸಬೇಕಾದರೆ ವರಿಷ್ಠರು ಶಾಸಕರ ಅಭಿಪ್ರಾಯ ಕೇಳಬೇಕಾಗುತ್ತದೆ. ಒಂದು ಸಲ ಆಯ್ಕೆ ಮಾಡಿದರೆ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದು ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದು ಬುಧವಾರ ಇಲ್ಲಿ ಸ್ಪಷ್ಟಪಡಿಸಿದರು.
‘ನಮ್ಮಲ್ಲಿ ಯಾವುದೇ ಬಣವಿಲ್ಲ, ನಾನಂತೂ ಸಿದ್ದರಾಮಯ್ಯ ಅವರ ಪರವಾಗಿ ಇರುತ್ತೇನೆ. ಅವರು ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದು ಹೈಕಮಾಂಡ್ ಹೇಳಿಲ್ಲ. ಹೀಗಾಗಿ ಬದಲಾವಣೆಯ ಪ್ರಶ್ನೆಯೂ ಉದ್ಭವಿಸುವುದಿಲ್ಲ’ ಎಂದರು.
‘ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ನವದೆಹಲಿಗೆ ತೆರಳುತ್ತಿದ್ದು ನನಗೂ ಬರಲು ಹೇಳಿದ್ದಾರೆ. ಯಾರನ್ನು ಸಚಿವರನ್ನಾಗಿ ಮಾಡಬೇಕು ಎನ್ನುವುದನ್ನು ಸಿ.ಎಂ. ಹಾಗೂ ವರಿಷ್ಠರು ನಿರ್ಧರಿಸುತ್ತಾರೆ. ಸಚಿವ ಸ್ಥಾನ ಕೊಡಿ ಎಂದು ಕೇಳಿದ್ದೇನೆ’ ಎಂದರು.
ದೆಹಲಿಯಲ್ಲಿ ನಡೆದ ಸ್ಫೋಟದ ಬಗ್ಗೆ ಪ್ರತಿಕ್ರಿಯಿಸಿ ’ಕೇಂದ್ರದ ಅಧೀನದಲ್ಲಿರುವ ಗುಪ್ತಚರ ಇಲಾಖೆ ವೈಫಲ್ಯದಿಂದ ದುರ್ಘಟನೆ ನಡೆದಿದ್ದು, ಸಣ್ಣ ವಿಷಯಗಳಿಗೂ ರಾಜೀನಾಮೆ ಕೊಡಿ ಎಂದು ನಮ್ಮನ್ನು ಕೇಳುವ ರಾಜ್ಯದ ಬಿಜೆಪಿ ನಾಯಕರು ಈಗ ಅಮಿತ್ ಶಾ ರಾಜೀನಾಮೆಯನ್ನು ಯಾಕೆ ಕೇಳಬಾರದು’ ಎಂದು ಪ್ರಶ್ನಿಸಿದರು. ಪ್ರಧಾನಿ ನರೇಂದ್ರ ಮೋದಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.