
ಕೊಪ್ಪಳ: ಕೇಂದ್ರ ಸರ್ಕಾರ ಜಾರಿ ಮಾಡಿರುವ ವಿಬಿ ಜಿ ರಾಮ್ ಜಿ ಮಸೂದೆ ತಕ್ಷಣವೇ ರದ್ದುಪಡಿಸಿ, ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿರುವ ಮಹಾತ್ಮ ಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾ ಮುಖಂಡ ಶರಣು ಗಡ್ಡಿ ‘2005ರಲ್ಲಿ ಜಾರಿಯಾದ ನರೇಗಾ ಯೋಜನೆಯು ಗ್ರಾಮೀಣ ಜನತೆ ಉದ್ಯೋಗಕ್ಕಾಗಿ ಪಟ್ಟಣಗಳಿಗೆ ವಲಸೆ ಹೋಗುವುದನ್ನು ತಡೆಯುವಲ್ಲಿ ಮಹತ್ವದ ಪಾತ್ರ ವಹಿಸಿತ್ತು. ಆದರೆ ಈಗ ಅದೇ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂಬ ಹೆಸರಿನಲ್ಲಿ ಮೂಲ ಸ್ವರೂಪವನ್ನೇ ಬದಲಾಯಿಸಿ ಉದ್ಯೋಗ ಖಾತ್ರಿಯನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇದು ಗ್ರಾಮೀಣ ಬದುಕಿನ ಮೇಲೆ ನಡೆಯುತ್ತಿರುವ ಘೋರ ದಾಳಿ’ ಎಂದರು.
‘ಈಗಾಗಲೇ ರಾಜ್ಯ ಸರ್ಕಾರ ಹಣಕಾಸಿನ ಕೊರತೆಯನ್ನು ಮುಂದಿಟ್ಟು ಹೆಚ್ಚುವರಿ ಹಣವನ್ನು ವಿನಿಯೋಗಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ–ರಾಜ್ಯ ಸರ್ಕಾರಗಳ ನಡುವೆ ಹಣ ಬಿಡುಗಡೆ ವಿಚಾರದಲ್ಲಿ ವಿಳಂಬವಾದರೆ ಅದರ ಸಂಪೂರ್ಣ ಹೊರೆ ಗ್ರಾಮೀಣ ಕೂಲಿ ಕಾರ್ಮಿಕರ ಮೇಲೆಯೇ ಬೀಳಲಿದೆ. ಇದರಿಂದ ಉದ್ಯೋಗ ಖಾತ್ರಿ ಯೋಜನೆಯ ಮೂಲ ಆಶಯವೇ ಹಾಳಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶರಣು ಪಾಟೀಲ್, ಶಾರದಾ ಗಡ್ಡಿ, ಮಂಗಳೇಶ್ ರಾಥೋಡ್, ದ್ಯಾಮಣ್ಣ ಡೊಳ್ಳಿನ, ಈರಪ್ಪ, ಲಕ್ಷ್ಮಣ, ಮುದಿಯಪ್ಪ, ಮಂಜುನಾಥ, ಸತ್ಯನಾರಾಯಣ ಸೇರಿದಂತೆ ಅನೇಕ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮೀಣ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.