ADVERTISEMENT

ನೇರ ಸೌಲಭ್ಯ ಒದಗಿಸಲು ಕ್ರಮವಹಿಸಿ: ಹಾಲಪ್ಪ ಆಚಾರ್ ಸೂಚನೆ

ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 4:17 IST
Last Updated 30 ಜುಲೈ 2022, 4:17 IST
ಕೊಪ್ಪಳದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್‌ ಮಾತನಾಡಿದರು
ಕೊಪ್ಪಳದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್‌ ಮಾತನಾಡಿದರು   

ಕೊಪ್ಪಳ: ‘ಇಲಾಖೆಯಿಂದ ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯ ಒದಗಿಸಲು ಪಾರದರ್ಶಕ ಕ್ರಮಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಅಧಿಕಾರಿಗಳು ಪ್ರತಿ ಹಂತದಲ್ಲೂ ಪಾಲಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಖಾತೆಸಚಿವ ಹಾಲಪ್ಪ ಆಚಾರ್ ಸೂಚಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ಅಂಗನವಾಡಿ, ಬಾಲಕರ ಹಾಗೂ ಬಾಲಕಿಯರ ಬಾಲಮಂದಿರ, ನಿರ್ಗತಿಕ ಮಕ್ಕಳಿಗೆ ಆಶ್ರಯ, ಗರ್ಭಿಣಿ, ಬಾಣಂತಿಯರಿಗೆ, ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವುದು ಸೇರಿದಂತೆ ಅವಶ್ಯಕತೆ ಇರುವ ಫಲಾನುಭವಿಗಳಿಗೆ ಅಗತ್ಯ ಸೇವೆಯನ್ನು ಇಲಾಖೆಯಿಂದ ಒದಗಿಸಲಾಗುತ್ತಿದೆ’ ಎಂದರು.

‘ಕೇಂದ್ರ ಸರ್ಕಾರದ ಮಾತೃ ಪೂರ್ಣ, ಮಾತೃ ವಂದನಾ ಯೋಜನೆಗಳ ಆಯ್ಕೆಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಿ. ಯಾವುದೇ ಯೋಜನೆ ಅನುಷ್ಠಾನದಲ್ಲಿ ಅವ್ಯವಹಾರಗಳಿಗೆ ಅವಕಾಶವಿಲ್ಲ. ಅಧಿಕಾರಿಗಳು ಕೂಡ ತಮ್ಮ ಅಧೀನ ಸಿಬ್ಬಂದಿಗೆ ಇಲಾಖೆಯ ನಿಯಮ, ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಲು ಸೂಚಿಸಬೇಕು’ ಎಂದರು.

ADVERTISEMENT

‘ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು, ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಪ್ರಕರಣಗಳಲ್ಲಿ ಅಧಿಕಾರಿಗಳು ಕೂಡಲೇ ಸಂತ್ರಸ್ತರನ್ನು ಭೇಟಿಯಾಗಿ ಅವರಿಗೆ ಇಲಾಖೆಯಿಂದ ನೀಡಬಹುದಾದ ಎಲ್ಲ ಸೌಲಭ್ಯಗಳನ್ನು ಒದಗಿಸಿ. ನಿಯಮಿತವಾಗಿ ಇಲಾಖೆ ನಿರ್ವಹಿಸುವ ಕಾರ್ಯಕ್ಕೂ ಸಂತ್ರಸ್ತರಿಗೆ ಸೌಲಭ್ಯ ಒದಗಿಸುವುದರಲ್ಲೂ ವ್ಯತ್ಯಾಸವಿದ್ದು, ಇದರ ಮೂಲಕ ಇಲಾಖೆಯ ಕುರಿತು ಸಾರ್ವಜನಿಕರಲ್ಲಿ ವಿಶ್ವಾಸವನ್ನು ಹೆಚ್ಚಿಸಬಹುದು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇ ಜು ಎಂ.ಟಿ ಮಾತನಾಡಿ ‘ಸರ್ಕಾರದ ಮಹತ್ವಾಕಾಂಕ್ಷಿ ತಾಲ್ಲೂಕುಗಳ ಘೋಷಣೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳು ಆಯ್ಕೆಯಾಗಿದ್ದು, ಸಿಡಿಪಿಒಗಳು ಪರಿಣಾಮಕಾರಿ ಕೆಲಸ ಮಾಡಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ., ಕಲಿಕಾ ಟಾಟಾ ಟ್ರಸ್ಟ್‌ನ ಶಿವಕುಮಾರ, ಚಿತ್ಕಲಾಂಬ, ಅರ್ಚನಾ, ಜಿಲ್ಲೆಯ ಎಲ್ಲ ತಾಲ್ಲೂಕುಗಳ ಹಾಗೂ ವಿವಿಧ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪಾಲ್ಗೊಂಡಿದ್ದರು.

‘ನಿವೇಶನ ಸಮಸ್ಯೆಯಿದ್ದರೆ ಗಮನಕ್ಕೆ ತನ್ನಿ‘

ಕೊಪ್ಪಳ:‘ಸ್ವಂತ ಕಟ್ಟಡಗಳಿಲ್ಲದ ಅಂಗನವಾಡಿಗಳಿಗೆ ಶೀಘ್ರ ಸ್ವಂತ ಕಟ್ಟಡ ಒದಗಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸಂಬಂಧಿಸಿದ ಶಾಸಕರಿಗೆ ಸೂಕ್ತ ಮಾಹಿತಿಯೊಂದಿಗೆ ಪ್ರಸ್ತಾವ ಸಲ್ಲಿಸಿ. ನಿವೇಶನ ಸಮಸ್ಯೆಯಿದ್ದರೆ ಜಿಲ್ಲಾಧಿಕಾರಿಗಳು, ಸಿಇಒ, ಶಾಸಕರು, ಸಚಿವರ ಗಮನಕ್ಕೆ ತರಬೇಕು ಎಂದು ಸಚಿವರು ಸೂಚನೆ ನೀಡಿದರು.

‘ಅಂಗನವಾಡಿ ಕಾರ್ಯಕರ್ತೆಯರು ಬೇರೆ ಇಲಾಖೆಗಳ ಕೆಲಸದ ನಡುವೆಯೂ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ನೀಡುತ್ತಿದ್ದಾರೆ. ಅತಿ ಹೆಚ್ಚು ಶ್ರಮ ವಹಿಸುವ ಅವರಿಗೆ ಗೌರವಧನವನ್ನು ಸರಿಯಾದ ಸಮಯಕ್ಕೆ ಒದಗಿಸಿ. ಯಾವುದೇ ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಬಾಕಿ ಉಳಿಸಿಕೊಳ್ಳಬಾರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.