ADVERTISEMENT

ಯಲಬುರ್ಗಾ| ಕೆರೆ ತುಂಬಿಸುವ ಕಾರ್ಯಕ್ಕೆ ಚಾಲನೆ ಇಂದು

ಚಾಲನೆ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 5:36 IST
Last Updated 29 ಮಾರ್ಚ್ 2023, 5:36 IST
ಯಲಬುರ್ಗಾ ಪಟ್ಟಣದ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಕೊಪ್ಪಳ ಏತನೀರಾವರಿ ಯೋಜನೆಯ ಕೆರೆತುಂಬಿಸುವ ಯೋಜನೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಿದ್ದಗೊಂಡ ವೇದಿಕೆ
ಯಲಬುರ್ಗಾ ಪಟ್ಟಣದ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಕೊಪ್ಪಳ ಏತನೀರಾವರಿ ಯೋಜನೆಯ ಕೆರೆತುಂಬಿಸುವ ಯೋಜನೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಿದ್ದಗೊಂಡ ವೇದಿಕೆ   

ಯಲಬುರ್ಗಾ: ಕೊಪ್ಪಳ ಏತನೀರಾವರಿ ಯೋಜನೆ ಅಡಿಯಲ್ಲಿ ತಾಲ್ಲೂಕಿನ ಹಗೇದಾಳ ಗ್ರಾಮದ ಬಳಿ ಯಲಬುರ್ಗಾ ಬ್ಯಾಂಚ್, ಫೀಡರ್‌ನ ಮುಖ್ಯಸ್ಥಾವರ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ ಬುಧವಾರ ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.

ಯಲಬುರ್ಗಾ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ ಪಾಲ್ಗೊಳ್ಳಲಿದ್ದು, ಮಹಿಳಾ ಮತ್ತು ಮಕ್ಕಳ ಸಚಿವ ಹಾಗೂ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಪಾಟೀಲ ಬಯ್ಯಾಪೂರ, ಕೆ.ರಾಘವೇಂದ್ರ ಹಿಟ್ನಾಳ್, ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಯಲಬುರ್ಗಾ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಅಮರೇಶ ಹುಬ್ಬಳ್ಳಿ ಭಾಗವಹಿಸಲಿದ್ದಾರೆ.

ADVERTISEMENT

ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ವಿಷಯ ಎಲ್ಲ ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಹೀಗಾಗಿ ಕೊಪ್ಪಳ ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಅನೇಕ ಬಾರಿ ಕ್ಷೇತ್ರದಲ್ಲಿ ರಾಜಕೀಯ ವಾಕ್ಸಮರಕ್ಕೂ ಹಾಗೂ ಮುಂಬರುವ ಚುನಾವಣೆಗೂ ಪ್ರಮುಖ ವಿಷಯವಾಗಿದೆ. ಹೀಗಾಗಿ ಇಂದಿನ ಕಾರ್ಯಕ್ರಮ ಬಹಳಷ್ಟು ಮಹತ್ವ ಪಡೆದುಕೊಂಡಿದೆ.

ವಿಶೇಷ ಆಹ್ವಾನಿತರಾಗಿ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶಸಿಂಗ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ ಅನಿಲಕುಮಾರ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕೃಷ್ಣಮೂರ್ತಿ ಬಿ ಕುಲಕರ್ಣಿ, ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್ ಶಿವಕುಮಾರ, ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಸೇರಿದಂತೆ ಅನೇಕರು ಪಾಲ್ಗೊಳ್ಳುವರು.

ಇದೇ ವೇಳೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಯಲಬುರ್ಗಾ ಪಟ್ಟಣದಲ್ಲಿ ನಿರ್ಮಾಣಗೊಳ್ಳಲಿರುವ 220/110/11 ಕೆವಿ ವಿದ್ಯುತ್ ಕೇಂದ್ರದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ನೆರವೇರಿಸುವರು. ಈ ಎಲ್ಲಾ ಕಾರ್ಯಕ್ರಮಕ್ಕೆ ಭವ್ಯ ವೇದಿಕೆ ನಿರ್ಮಾಣ ಮಾಡಲಾಗಿದೆ.

ಹೆಲಿಪ್ಯಾಡ್‌: ಬುಧವಾರ ಬೆಳಿಗ್ಗೆ 10.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೊರಡಲಿರುವ ಮುಖ್ಯಮಂತ್ರಿ 11 ಗಂಟೆಗೆ ಯಲಬುರ್ಗಾದ ಸರ್ಕ್ಯೂಟ್ ಹೌಸ್ ಸಮೀಪದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ಗೆ ಬರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.