ADVERTISEMENT

ಪ್ರಜಾಪ್ರಭುತ್ವ ಬಲಪಡಿಸಲು ಮತದಾರರು ಅಗತ್ಯ: ಬಿ.ಎಸ್ ರೇಖಾ

ರಾಷ್ಟ್ರೀಯ ಮತದಾರರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 5:34 IST
Last Updated 26 ಜನವರಿ 2023, 5:34 IST
ಕೊಪ್ಪಳದ ತಾಲ್ಲೂಕು ಕ್ರೀಡಾಂಗಣದಲ್ಲಿ ಬುಧವಾರ ನಡೆದ 13ನೇ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಬಿ.ಎಸ್ ರೇಖಾ ಉದ್ಘಾಟಿಸಿದರು
ಕೊಪ್ಪಳದ ತಾಲ್ಲೂಕು ಕ್ರೀಡಾಂಗಣದಲ್ಲಿ ಬುಧವಾರ ನಡೆದ 13ನೇ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಬಿ.ಎಸ್ ರೇಖಾ ಉದ್ಘಾಟಿಸಿದರು   

ಕೊಪ್ಪಳ: ‘ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಈ ವ್ಯವಸ್ಥೆ ಮತ್ತಷ್ಟು ಬಲಪಡಿಸಲು ಎಲ್ಲಾ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅಗತ್ಯವಾಗಿದೆ’ ಎಂದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಬಿ.ಎಸ್ ರೇಖಾ ಹೇಳಿದರು.

13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಗರದ ತಾಲ್ಲೂಕು ಕ್ರೀಡಾಂಣದಲ್ಲಿ ಬುಧವಾರ ಸ್ವೀಪ್ ಚಟುವಟಿಕೆಯ ಭಾಗವಾಗಿ ಹಮ್ಮಿಕೊಂಡಿದ್ದ ಬೃಹತ್ ಮಾನವ ಸರಪಳಿ ಹಾಗೂ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಅವೆರು ಮಾತನಾಡಿದರು.

‘ದೇಶದಲ್ಲಿ ಜರುಗುವ ಯಾವುದೇ ಚುನಾವಣೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು. ಸಂವಿಧಾನ ನಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಮತದಾನದ ಹಕ್ಕು ನೀಡಿದೆ. ಇದನ್ನು ನಾವು ಚಲಾಯಿಸದಿದ್ದಲ್ಲಿ, ನಮಗೆ ನಾವೆ ವಂಚನೆ ಮಾಡಿಕೊಂಡಂತಾಗುತ್ತದೆ’ ಎಂದರು.

ADVERTISEMENT

ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಮಾತನಾಡಿ ‘ಮತದಾನಕ್ಕಿಂತ ಮತ್ತೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೇ’ ಎನ್ನುವುದು ಈ ಸಲದ ಧೇಯವಾಕ್ಯವಾಗಿದ್ದು, ಅದರಂತೆ ಎಲ್ಲಾ ಮತದಾರರು ಮತದಾನದ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ ‘ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ನಾವು, ದೇಶದಲ್ಲಿ ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುವ, ಚುನಾವಣೆಗಳಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ, ಮತ ಚಲಾಯಿಸುತ್ತೇವೆ’ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.

300X200 ಅಡಿ ಅಳತೆಯ ಭಾರತದ ನಕ್ಷೆ ಮತ್ತು ಅದರೊಳಗೆ ಮತಚಲಾಯಿಸಲು ಸಾರ್ವಜನಿಕರಿಗೆ ಪ್ರೇರೆಪಿಸುವ ಚೆಹ್ನೆ ಮತ್ತು ಸ್ವೀಪ್‌ ಎಂದು ರಚಿಸಿದ್ದು ಗಮನ ಸೆಳೆಯಿತು. ಕೊಪ್ಪಳದ ವಿವಿಧ ಕಾಲೇಜುಗಳ ಸುಮಾರು ಐದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದಕ್ಕೆ ಕೈ ಜೋಡಿಸಿದರು.

ಜನಪದ ಕಲಾವಿದರಾದ ಮೆಹಬೂಬ್ ಕಿಲ್ಲೇದಾರ್‌ ಮತ್ತು ಹನುಮಂತಪ್ಪ ಕುರಿ ಸಂಯೋಜನೆಯಲ್ಲಿ ಜಿಲ್ಲೆಯ ಹ್ಯಾಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ನೈತಿಕ ಮತದಾನ ಕುರಿತಾದ ದೃಶ್ಯ ರೂಪಕ ಪ್ರದರ್ಶನ ತೋರಿಸಲಾಯಿತು.

ಜಿ.ಪಂ. ಸಿಇಒ ಬಿ.ಫೌಜಿಯಾ ತರನ್ನುಮ್, ಉಪಕಾರ್ಯದರ್ಶಿ ಸಮೀರ್ ಎಂ.ಮುಲ್ಲಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಕೊಪ್ಪಳ ತಹಶೀಲ್ದಾರ್ ಅಮರೇಶ ಬಿರಾದರ್, ಶಾಲಾ, ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ಚಿತ್ರಕಲಾ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.