ಕೊಪ್ಪಳ: ‘ಜಿಲ್ಲೆಯಲ್ಲಿ ಈಗಾಗಲೇ ಯೂರಿಯಾ ಗೊಬ್ಬರ ಕಳೆದ ಸಲಕ್ಕಿಂತಲೂ ಹೆಚ್ಚು ಸರಬರಾಜು ಆಗಿದೆ. ಅಂಗಡಿಗಳಲ್ಲಿ ಸಂಗ್ರಹಿಸಿಟ್ಟುಕೊಂಡು ಕೃತಕ ಅಭಾವ ಸೃಷ್ಟಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಂಗಡಿಯ ಪರವಾನಗಿ ರದ್ದು ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶುಕ್ರವಾರ ವಿಡಿಯೊ ಕಾನ್ಫೆರೆನ್ಸ್ ಮೂಲಕ ಜಿಲ್ಲೆಯ ಬೆಳೆ ಸಮೀಕ್ಷೆ ಹಾಗೂ ಬೆಳೆವಿಮೆ ಪ್ರಗತಿ ಪರಿಶೀಲನೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು,‘ಜಿಲ್ಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಜಾಗೃತ ದಳದವರು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ವಿಮಾ ಯೋಜನೆ ಕಳೆದ ವರ್ಷ 86 ಸಾವಿರ ರೈತರು ಮಾಡಿಸಿದ್ದು, ಈ ಸಲ ಮಳೆ ಕಡಿಮೆ ಆಗಿರುವುದರಿಂದ ಹೆಚ್ಚಿನ ರೈತರು ಬೆಳೆ ವಿಮೆ ಮಾಡಿಸಲು ಅವರಿಗೆ ಮಾಹಿತಿ ನೀಡಬೇಕು. ಬೆಳೆ ಸಮೀಕ್ಷೆ ಕಾರ್ಯ ತ್ವರಿತವಾಗಿ ಮಾಡಬೇಕು’ ಎಂದು ನಿರ್ದೇಶನ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಮಾತನಾಡಿ,‘ಕಳೆದ ವರ್ಷ 16,445 ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿತ್ತು. ಈ ವರ್ಷ 19,799 ಮೆಟ್ರಿಕ್ ಟನ್ ವಿತರಣೆಯಾಗಿದೆ. ಇನ್ನೂ ಒಂಬತ್ತು ಸಾವಿರ ಮೆಟ್ರಿಕ್ ಟನ್ ಸಂಗ್ರಹವಿದೆ. ರಸಗೊಬ್ಬರದ ಕೊರತೆಯಿಲ್ಲ’ ಎಂದರು.
ತೋಟಗಾರಿಕೆ ಇಲಾಖೆಯ ಉಪನಿರ್ದೆಶಕ ಕೃಷ್ಣ ಉಕ್ಕುಂದ, ಕೃಷಿ ಇಲಾಖೆಯ ಉಪನಿರ್ದೇಶಕ ಎಲ್.ಸಿದ್ದೇಶ್ವರ, ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ಸಹಾಯಕ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಅಧಿಕಾರಿಗಳು ಹಾಗೂ ವಿಮಾ ಕಂಪನಿ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಕಾಳ ಸಂತೆಯಲ್ಲಿ ರಸಗೊಬ್ಬರ ಅನಧಿಕೃತ ಮಾರಾಟ ಮತ್ತು ದಾಸ್ತಾನು ಕಂಡು ಬಂದಲ್ಲಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿಗಳಾದ ಸುನಿಲ್ ಕುಮಾರ್ (ಮೊ.ಸಂ: 8277932117) ನಾಗರಾಜ (8277932109) ಅವರಿಗೆ ಕರೆ ಮಾಡಿ ದೂರು ನೀಡಬೇಕು. ದಿನದ 24 ಗಂಟೆಯೂ ಈ ಸೌಲಭ್ಯವಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಸಗೊಬ್ಬರ ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡಿದ ನಾಲ್ಕು ಅಂಗಡಿಗಳ ಪರವಾನಗಿ ಅಮಾನತು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.