ಕೊಪ್ಪಳ: ಕಟ್ಟಡ ನಿರ್ಮಾಣ ಕಾರ್ಮಿಕರ ಸಮಸ್ಯೆಗಳು ಹಾಗೂ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ (ಜೆಸಿಟಿಯು) ಜಿಲ್ಲಾ ಘಟಕದಿಂದ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಯಿತು. ಬಳಿಕ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನು ಬದ್ಧವಾಗಿ ಇದುವರೆಗೂ ಸಿಗುತ್ತಿದ್ದ ಸೌಲಭ್ಯಗಳು ಈಗ ಸಿಗುತ್ತಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆಗೂ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಕಳೆದ 12 ತಿಂಗಳಲ್ಲಿ 12 ಹೋರಾಟಗಳು ಈ ಸಂಬಂಧ ನಡೆದಿವೆ. ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ, ವೈದ್ಯಕೀಯ ಪರಿಹಾರಕ್ಕೆ ಸಲ್ಲಿಕೆಯಾದ ಸಾವಿರಾರು ಅರ್ಜಿಗಳು ಒಂದು ವರ್ಷದಿಂದ ಕೊಳೆಯುತ್ತಿವೆ. ಪಿಂಚಣಿದಾರರ ಪಿಂಚಣಿ ನಿಂತುಹೋಗಿದೆ, ಹೀಗಾಗಿ ಅವರ ಜೀವನ ಕಷ್ಟಕ್ಕೆ ಸಿಲುಕಿದೆ ಎಂದು ಸಂಘಟನೆಯವರು ಹೇಳಿದರು.
ಶೈಕ್ಷಣಿಕ ಸಹಾಯಧನ ಸಂಬಂಧಿಸಿ ಹೊರಡಿಸಲಾಗಿದ್ದ 2023ರ ಅಧಿಸೂಚನೆ ರದ್ದುಮಾಡಿ, ರಾಜ್ಯ ಹೈಕೋರ್ಟ್ ಆದೇಶದಂತೆ ಕನಿಷ್ಠ ಕಾಲೇಜು ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 2021ರ ಅಧಿಸೂಚನೆ ಅನ್ವಯವೇ ಶೈಕ್ಷಣಿಕ ಸಹಾಯಧನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು ಸಂಯೋಜಿತ) ಜಿಲ್ಲಾಧ್ಯಕ್ಷ ಖಾಸೀಮ್ ಸಾಬ್ ಸರ್ದಾರ್, ಜಿಲ್ಲಾ ಉಪಾಧ್ಯಕ್ಷ ಇಸ್ಮಾಯಿಲ್ ಇಟಗಿ, ತಾಲ್ಲೂಕು ಅಧ್ಯಕ್ಷ ಹನುಮೇಶ್ ಭೋವಿ, ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ (ಎಐಟಿಯುಸಿ ಸಂಯೋಜಿತ) ಜಿಲ್ಲಾಧ್ಯಕ್ಷ ತುಕಾರಾಮ ಬಿ. ಪಾತ್ರೋಟ, ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಎ.ಗಫಾರ್, ಪ್ರಧಾನ ಕಾರ್ಯದರ್ಶಿ ಎ.ಎಲ್.ತಿಮ್ಮಣ್ಣ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.