
ಯಲಬುರ್ಗಾ: ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶುಕ್ರವಾರ ಜರುಗಿದೆ.
ಬಿಸಿಊಟ ಕಾರ್ಯಕರ್ತೆಯರ ಹಾಗೂ ಶಾಲೆಯ ಮುಖ್ಯಶಿಕ್ಷಕರ ನಿರ್ಲಕ್ಷದಿಂದ ಘಟನೆ ಸಂಭವಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಗ್ರಾಮಸ್ಥರು ಆಗ್ರಹಹಿಸಿದರು.
ಘಟನೆಯ ಸುದ್ದಿ ತಿಳಿದು ತಹಶೀಲ್ದಾರ್ ಪ್ರಕಾಶ ನಾಶಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಗೌಡ್ರ, ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ಧರಣಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ವರದಿ ಸಲ್ಲಿಸಲು ಸೂಚನೆ: ಈ ಸಂದರ್ಭದಲ್ಲಿ ಗ್ರಾಮಸ್ಥರ ಹಾಗೂ ಶಿಕ್ಷಕರ ಅಭಿಪ್ರಾಯವನ್ನು ಸಂಗ್ರಹಿಸಿ ಘಟನೆಯ ಕುರಿತ ಸಂಪೂರ್ಣ ಮಾಹಿತಿಯನ್ನು ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವರದಿ ಆಧಾರದ ಮೇಲೆ ಅಡುಗೆ ತಯಾರಿಸುವವರ ಮತ್ತು ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.