ADVERTISEMENT

`ಕುಡಿಯುವ ನೀರು ಕಾಮಗಾರಿಗೆ ್ಙ2.5 ಕೋಟಿ ವೆಚ್ಚ'

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2012, 7:42 IST
Last Updated 27 ಡಿಸೆಂಬರ್ 2012, 7:42 IST

ಶ್ರೀರಂಗಪಟ್ಟಣ: ತಾಲ್ಲೂಕಿನ ಮಹಾದೇವಪುರ, ಚನ್ನಹಳ್ಳಿ, ತರಿಪುರ ಹಾಗೂ ಬಿದರಹಳ್ಳಿ ಗ್ರಾಮಗಳಿಗೆ ಕಾವೇರಿ ನದಿಯಿಂದ ಕುಡಿಯುವ ನೀರು ಪೂರೈಸುವ ರೂ.2.5 ಕೋಟಿ ವೆಚ್ಚದ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿದೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ಮಹಾದೇವಪುರದಲ್ಲಿ ಬುಧವಾರ ರೂ.7.40 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ನಾಲ್ಕು ಗ್ರಾಮಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಉದ್ದೇಶಿತ ಕಾಮಗಾರಿ ಶೀಘ್ರ ಆರಂಭವಾಗಲಿದ್ದು, ಇನ್ನು 6 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಅಂಬೇಡ್ಕರ್ ಸಮುದಾಯ ಭವನಕ್ಕೆ ಸಂಸದರ ನಿಧಿಯಿಂದ ರೂ.4 ಲಕ್ಷ ಹಾಗೂ ಗ್ರಾಮ ಪಂಚಾಯಿತಿಯಿಂದ ರೂ.3.40 ಲಕ್ಷ ಹಣ ನೀಡಲಾಗಿದೆ. ತಾಲ್ಲೂಕಿನಲ್ಲಿ 600 ಪರಿಶಿಷ್ಟ ಜಾತಿ/ಪಂಗಡದ ಸ್ತ್ರೀಶಕ್ತಿ ಸಂಘಗಳಿಗೆ ಸಹಾಯಧನ ನೀಡಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ 350 ಕೊಳವೆ ಬಾವಿ ಕೊರೆಸಲಾಗಿದೆ. ಮಹಾದೇವಪುರಕ್ಕೆ ಸರ್ಕಾರಿ ಪ್ರೌಢಶಾಲೆ, ಜೂನಿಯರ್ ಕಾಲೇಜು ಮಂಜೂರಾಗಿದೆ ಎಂದು ತಿಳಿಸಿದರು.

ಸಂಸದ ಎನ್.ಚಲುವರಾಯಸ್ವಾಮಿ ಮಾತನಾಡಿ, 5 ದಶಕಗಳ ಕಾಲ ಆಳ್ವಿಕೆ ನಡೆಸಿದ ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗದ ಜನರ ಏಳಿಗೆಗೆ ಪರಿಣಾಮಕಾರಿ ಯೋಜನೆ ಜಾರಿಗೆ ತರಲು ಸಾಧ್ಯವಾಗಿರಲಿಲ್ಲ. ಆದರೆ, ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲಿ ಲಾಟರಿ ಹಾಗೂ ಸಾರಾಯಿ ನಿಷೇಧದಂತಹ ಕೆಲಸಗಳು ಆಗಿವೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಬಸವರಾಜು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ನಂದೀಶ್‌ಕುಮಾರ್, ಉಪಾಧ್ಯಕ್ಷ ಮಹಾದೇವಸ್ವಾಮಿ, ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ, ವಿಎಸ್‌ಎಸ್‌ಎನ್ ಅಧ್ಯಕ್ಷ ಜವನೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಮ್ಮ, ಮರಿಸ್ವಾಮಿಗೌಡ, ಸಜ್ಜೇಗೌಡ, ಟಿ.ಎಂ.ಹೊಸೂರು ಸಿದ್ದೇಗೌಡ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.