ADVERTISEMENT

ಕೆರೆಗೆ ನೀರು ತುಂಬಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2013, 9:24 IST
Last Updated 3 ಸೆಪ್ಟೆಂಬರ್ 2013, 9:24 IST

ಚಿಕ್ಕೋಡಿ: ತಾಲ್ಲೂಕಿನ ಮೀರಾಪುರಹಟ್ಟಿ ಗ್ರಾಮದಲ್ಲಿ ನಿರ್ಮಿಸಿರುವ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಜಾರಿಗೆ ತರಬೇಕು ಮತ್ತು ಟ್ಯಾಂಕರ್ ಮೂಲಕ ಜನರಿಗೆ ಕುಡಿಯುವ ನೀರನ್ನು ಒದಗಿಸಬೇಕು ಎಂದು ಆಗ್ರಹಿಸಿ ಮೀರಾಪುರಹಟ್ಟಿಯ ಗ್ರಾಮಸ್ಥರು ಸೋಮವಾರ ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಜೆಡಿಯು ಕಾರ್ಯದರ್ಶಿ ಭೀಮಗೌಡ ಖೋತ ನೇತೃತ್ವದಲ್ಲಿ ಮೀರಾಪುರಹಟ್ಟಿಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಸೇರಿದಂತೆ ಗ್ರಾಮಸ್ಥರು ಪಟ್ಟಣದ ಬಸವ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಕೆಲಹೊತ್ತು ರಸ್ತೆ ನಡೆಸಿ ಪ್ರತಿಭಟನೆ ವ್ಯಕ್ತಪಡಿಸಿದರು. ನಂತರ ಉಪವಿಭಾಗಾಧಿಕಾರಿ ಡಾ.ರುದ್ರೇಶ ಘಾಳಿ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಮೂರು ಕೆರೆಗಳನ್ನು ಸುಮಾರು ರೂ 2.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.   ಆದರೆ, ಇಲ್ಲಿಯವರೆಗೆ ಕೆರೆಗಳ ಉಪಯೋಗ ಮಾತ್ರ ಆಗಿಲ್ಲ. ಈ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮಂಜೂರು ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಬೇಕು. ಅಲ್ಲದೇ ಕೆರೆಗಳಿಗೆ ನೀರು ತುಂಬಿಸಿದರೆ ಕೆರೆಗಳ ಇಳಿಜಾರಿನಲ್ಲಿರುವ ಸುಮಾರು 1500 ಎಕರೆ ಭೂಮಿ ನೀರಾವರಿ ವ್ಯಾಪ್ತಿಗೆ ಒಳಪಡುತ್ತವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ರಮೇಶ ಹುಡೇದ, ಮಹಾದೇವ ಹುಡೇದ, ಸೋಮನಾಥ ಅಂಬಣಗೋಳ, ಮಾನಿಕ ರೊಟ್ಟಿ, ಬಸಲಿಂಗ ಪುಲಗಡ್ಡಿ ಸೇರಿದಂತೆ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.