ADVERTISEMENT

ಗ್ರಾಮೀಣ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸಿ: ಶಾಸಕ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2012, 5:15 IST
Last Updated 6 ನವೆಂಬರ್ 2012, 5:15 IST

ಕೃಷ್ಣರಾಜಪೇಟೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜಕೀಯ ಮರೆತು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಶಾಸಕ ಕೆ.ಬಿ.ಚಂದ್ರಶೇಖರ್ ಸಲಹೆ ನೀಡಿದರು.

ತಾಲ್ಲೂಕಿನ ಬಂಡಿಹೊಳೆ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕಿನ ಬಹುತೇಕ ಗ್ರಾಮಗಳು ಉತ್ತಮ ಮೂಲ ಸೌಲಭ್ಯಗಳನ್ನು ಹೊಂದುವತ್ತ ಸಾಗುತ್ತಿವೆ.

ಬಂಡಿಹೊಳೆ ಗ್ರಾಮವೂ ಸಹ ಸುವರ್ಣಗ್ರಾಮ ಯೋಜನೆಗೆ ಸೇರಿದ್ದು, ಒಂದನೇ ಹಂತದ ಕಾಮಗಾರಿಗಳು ಮುಗಿದು, ಎರಡನೇ ಹಂತವು ಆರಂಭವಾಗಬೇಕಿದೆ. ಈ ಸಂಬಂಧ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು. ಗ್ರಾಮಕ್ಕೆ ಅಗತ್ಯವಾಗಿರುವ ನಾಡಕಚೇರಿ, ಪೊಲೀಸ್ ಹೊರ ಠಾಣೆಯನ್ನು ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಸಮಾರಂಭದಲ್ಲಿ ಭಾಗವಹಿಸಿದ್ದ ವಿಧಾನಸಭೆ ಮಾಜಿ ಅಧ್ಯಕ್ಷ ಕೃಷ್ಣ, ಗ್ರಾಮಗಳ ಅಭಿವೃದ್ಧಿಗೆ ಸರ್ಕಾರದ ಕಡೆ ಮುಖಮಾಡಿ ಕೂರುವ ಪರಿಪಾಠ ತಪ್ಪಬೇಕು. ಸಾರ್ವಜನಿಕರು ನರೇಗಾದಂತಹ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು. ಭ್ರಷ್ಟಾಚಾರವನ್ನು ವಿರೋಧಿಸಿ, ಚುನಾವಣಾ ಆಮಿಶಗಳನ್ನು ತಿರಸ್ಕರಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದರು.

ಬಂಡಿಹೊಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಮಾಕ್ಷಮ್ಮ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಬಿ.ಪ್ರಕಾಶ್, ಮೈಸೂರು ಲ್ಯಾಂಪ್ಸ್ ಮಾಜಿ ಅಧ್ಯಕ್ಷ ಬಿ.ಎಲ್.ದೇವರಾಜು, ಜಿಲ್ಲಾ  ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಬಸವರಾಜು, ಸದಸ್ಯೆ ಅನುಸೂಯಾ ಗಂಗಾಧರ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಅಶೋಕ್‌ಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಮಂಜುನಾಥ್, ಉಪಾಧ್ಯಕ್ಷೆ ಭುವನೇಶ್ವರಿ ಮೋಹನ್, ಸದಸ್ಯೆ ಭಾರತಿ ಅಶೋಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT