ADVERTISEMENT

ಜಲವಿದ್ಯುತ್ ಉತ್ಪಾದನಾ ಘಟಕಕ್ಕೆ ಗ್ರಾಮಸ್ಥರ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2012, 6:05 IST
Last Updated 12 ಅಕ್ಟೋಬರ್ 2012, 6:05 IST

ಕೃಷ್ಣರಾಜಪೇಟೆ: ಪರವಾನಿಗೆ ನವೀಕರಣ, ವಾರ್ಷಿಕ ತೆರಿಗೆ ಪಾವತಿ ಸೇರಿದಂತೆ ಅಗತ್ಯ ನಿಯಮಾವಳಿಗಳನ್ನು ಪಾಲಿಸದಿರುವ ತಾಲ್ಲೂಕಿನ ಬಂಡಿಹೊಳೆಯ ತ್ರಿಶೂಲ್ ಜಲವಿದ್ಯುತ್ ಉತ್ಪಾದನಾ ಘಟಕಕ್ಕೆ ಸ್ಥಳೀಯ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಾಮಾಕ್ಷಮ್ಮ ನೇತೃತ್ವದಲ್ಲಿ ಗುರುವಾರ ವಿವಿಧ ಸಂಘಟನೆಗಳ ಮುಖಂಡರು ಮತ್ತು ಗ್ರಾಮಸ್ಥರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ತ್ರಿಶೂಲ್ ಜಲವಿದ್ಯುತ್ ಉತ್ಪಾದನಾ ಘಟಕವು ಸ್ಥಳೀಯ ಗ್ರಾಮಪಂಚಾಯ್ತಿಗೆ ಪಾವತಿಸಬೇಕಾದ ಲಕ್ಷಾಂತರ ರೂ. ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಹಲವಾರು ಬಾರಿ ಈ ಬಗ್ಗೆ ತಿಳಿವಳಿಕೆ ಪತ್ರ ನೀಡಿದ್ದರೂ ಗಮನಕ್ಕೆ ತೆಗೆದುಕೊಳ್ಳದೆ ನಿರ್ಲಕ್ಷ್ಯ ಭಾವನೆ ತೋರಿಸುತ್ತಿದೆ. ಘಟಕದ ಆರಂಭದ ಸಂದರ್ಭದಲ್ಲಿ ಗ್ರಾಮದ ಮುಖಂಡರಿಗೆ ವಾಗ್ದಾನ ಮಾಡಿದ್ದಂತೆ ಯಾವುದೇ ಜನೊಪಯೋಗಿ ಕಾರ್ಯಗಳನ್ನು ಮಾಡಿಲ್ಲ ಎಂಬುದು ಪ್ರತಿಭಟನಾಕಾರರ ಆರೋಪವಾಗಿತ್ತು. ತಮ್ಮ ಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿ, ತೆರಿಗೆ ಬಾಕಿ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಒಂದು ವಾರದ ಕಾಲಾವಕಾಶವನ್ನು ಸ್ಥಳೀಯ ಘಟಕದ ವ್ಯವಸ್ಥಾಪಕ ಪ್ರಮೋದ್ ಕೋರಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ತಾಲ್ಲೂಕು ಪಂಚಾಯ್ತಿ ಸದಸ್ಯೆ ಭಾರತಿ ಅಶೋಕ್, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಟಿ.ಗಂಗಾಧರ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಅಶೋಕ್ ಕುಮಾರ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಡಾ.ಕೃಷ್ಣಮೂರ್ತಿ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷ ಶೇಷಾದ್ರಿ, ಮಾಜಿ ಉಪಾಧ್ಯಕ್ಷ ಲಕ್ಷ್ಮೀಪುರ ಮಂಜುನಾಥ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.